
ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿಸಿರುವುದನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನವೆಂಬರ್ ಎರಡನೇ ವಾರಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ಇದರೊಂದಿಗೆ ಸತತ 7ನೇ ಬಾರಿಗೆ ಪ್ರಕರಣದ ವಿಚಾರಣದೆ ಮುಂದೂಡಿದಂತಾಗಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ಮಾತ್ರ ಪೂರ್ಣಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಭೂಮಿಯ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ ರಾಜೇಶ್ ರೈ ಅವರ ವಿಭಾಗೀಯ ಪೀಠ ನಡೆಸಿತು.
ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ” ಎಂದರು. ಆಗ ಪೀಠವು “ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಹೀಗಾಗಿ, ನವೆಂಬರ್ ಮೊದಲ ವಾರದಲ್ಲಿ ಅರ್ಜಿ ನಡೆಸಬಹುದೇ” ಎಂದರು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ವಿಚಾರಣೆಗೆ ಪಟ್ಟಿಯಾಗಿದ್ದ ಸಿದ್ದರಾಮಯ್ಯ ಸಲ್ಲಿಸಿರುವ ಒಂದು ಮತ್ತು ಜೆ ದೇವರಾಜು ಸಲ್ಲಿಸಿರುವ ಎರಡು ಮೇಲ್ಮನವಿಗಳು ವಿಚಾರಣೆಯನ್ನು ನವೆಂಬರ್ ಎರಡನೇ ವಾರಕ್ಕೆ ನ್ಯಾಯಾಲಯ ಮುಂದೂಡಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿಸಿದ್ದ ಆದೇಶವನ್ನು ಏಕಸದಸ್ಯ ಪೀಠವು 2024ರ ಸೆಪ್ಟೆಂಬರ್ 24ರಂದು ಎತ್ತಿ ಹಿಡಿದಿತ್ತು. ಆನಂತರ ಒಂದು ತಿಂಗಳ ಬಳಿಕ ಸಿದ್ದರಾಮಯ್ಯ ಅವರು ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ನವೆಂಬರ್ ಮೂರನೇ ವಾರಕ್ಕೆ ದೇವರಾಜು ಸಲ್ಲಿಸಿರುವ ಮೇಲ್ಮನವಿಗಳಿಗೆ ಒಂದು ವರ್ಷ ಪೂರ್ಣಗೊಳ್ಳಲಿದೆ.