ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ಪ್ರಕರಣದ ಆದೇಶ ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್‌

ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ.
PSI exam scam and Karnataka HC
PSI exam scam and Karnataka HC

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಈಚೆಗೆ ಆದೇಶ ಕಾಯ್ದಿರಿಸಿದೆ.

ಕೋಲಾರದ ಚಂದನ್‌ ಎನ್‌ ವಿ ಸೇರಿದಂತೆ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ಒಟ್ಟಾಗಿಸಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠವು ಆದೇಶ ಕಾಯ್ದಿರಿಸಿದೆ.

ಪಿಎಸ್‌ಐ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಪೀಠವು ಆಗಸ್ಟ್‌ 4ರ ವಿಚಾರಣೆಯಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

Also Read
ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರವು ಪೀಠಕ್ಕೆ ಸಲ್ಲಿಸಿತ್ತು.

ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ 2022ರ ಸೆಪ್ಟೆಂಬರ್‌ 28ರಂದು ಹೈಕೋರ್ಟ್‌ ತಡೆ ವಿಧಿಸಿದ್ದು, ಆ ಆದೇಶ ಚಾಲ್ತಿಯಲ್ಲಿದೆ.

Also Read
ಪಿಎಸ್‌ಐ ಹಗರಣ: ಆಯ್ಕೆಯಾದವರಲ್ಲಿ ಕಳಂಕರಹಿತರಿಗೆ ಮಾತ್ರವೇ ಒಂದು ಪರೀಕ್ಷೆ ನಡೆಸಲು ಸಾಧ್ಯವೇ ಎಂದು ಕೇಳಿದ ಹೈಕೋರ್ಟ್‌

ರಾಜ್ಯ ಸರ್ಕಾರವು 2022ರ ಏಪ್ರಿಲ್‌ 29ರಂದು ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) 2022ರ ಜುಲೈ 19ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಾದಿತ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪಿ ಎಸ್‌ ರಾಜಗೋಪಾಲ, ಡಿ ಆರ್‌ ರವಿಶಂಕರ್‌, ಕೆ ಎನ್‌ ಫಣೀಂದ್ರ, ವಕೀಲ ಸಂತೋಷ್‌ ಕುಮಾರ್‌ ನಗರ್ಲೆ, ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿದ್ದರು.

Related Stories

No stories found.
Kannada Bar & Bench
kannada.barandbench.com