ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯಿಸಲು ಸೂಚಿಸಿದ ಕರ್ನಾಟಕ ಹೈಕೋರ್ಟ್

ಆತ್ಮಹತ್ಯೆ ಮಾಡಿಕೊಳ್ಳುವಾಗ ಬರೆದಿಟ್ಟ ಪತ್ರದಲ್ಲಿ ಮೃತ ವ್ಯಕ್ತಿ ತನ್ನ ಸಂಕಷ್ಟಗಳನ್ನು ಹೇಳಿಕೊಂಡಿದ್ದರು. ಇದನ್ನು ಗಮನಿಸಿದ ನ್ಯಾಯಾಲಯ ಈ ಆದೇಶ ಜಾರಿಗೊಳಿಸಿದೆ.
ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯಿಸಲು ಸೂಚಿಸಿದ ಕರ್ನಾಟಕ ಹೈಕೋರ್ಟ್

ಸುರಕ್ಷತಾ ವಿಧಾನ ಅನುಸರಿಸದೇ ಬರಿಗೈಯಲ್ಲಿ ಶೌಚಗುಂಡಿ ಸ್ವಚ್ಛಗೊಳಿಸಲು ಅಧಿಕಾರಿಗಳು ಒತ್ತಡ ಹೇರಿದ್ದರಿಂದಾಗಿ ಮದ್ದೂರಿನ ಪೌರಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಹೈಕೋರ್ಟ್‌ ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಮಲಹೊರುವ ಪದ್ದತಿ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾಯಾಲಯ ಇತ್ತೀಚಿನ ಆತ್ಮಹತ್ಯೆ ಘಟನೆಯನ್ನು ಗಮನಿಸಿತು. ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ಡಿ ರೊಜಾರಿಯೋ ಅವರು ಘಟನೆಯನ್ನು ಎತ್ತಿ ತೋರಿಸುವ ಜ್ಞಾಪನಾಪತ್ರವನ್ನು ಸಲ್ಲಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.

Also Read
ಶೌಚಗುಂಡಿ ಸ್ವಚ್ಛತೆಗೆ ಸಂಬಂಧಿಸಿದ ಕಾಯಿದೆ ಜಾರಿಗೆ ಬಂದೇ ಇಲ್ಲ: ಆದೇಶ ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್‌

ಆತ್ಮಹತ್ಯೆ ಮಾಡಿಕೊಳ್ಳುವಾಗ ಬರೆದಿಟ್ಟ ಪತ್ರದಲ್ಲಿ ಮೃತ ಪೌರಕಾರ್ಮಿಕ ನಾರಾಯಣ ತನ್ನ ಸಂಕಷ್ಟಗಳನ್ನು ಹೇಳಿಕೊಂಡಿದ್ದರು. ಸುರಕ್ಷತಾ ವಿಧಾನ ಅನುಸರಿಸದೇ ಬರಿಗೈಯಲ್ಲಿ ಶೌಚಗುಂಡಿ ಸ್ವಚ್ಛಗೊಳಿಸಲು ಅಧಿಕಾರಿಗಳು ಒತ್ತಡ ಹೇರಿದ ಪರಿಣಾಮ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದರು. ಇದನ್ನು ನ್ಯಾಯಾಲಯಕ್ಕೆ ವಿವರಿಸಲಾಯಿತು. ಆಗ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿತು.

ಇದೇ ವೇಳೆ ಜನವರಿ 28 ರಂದು ಕಲಬುರ್ಗಿಯಲ್ಲಿ ಶೌಚಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಸಾವನ್ನಪ್ಪಿದ ಇಬ್ಬರು ಪೌರಕಾರ್ಮಿಕರ ಕುರಿತಂತೆಯೂ ಪೀಠ ಚರ್ಚಿಸಿತು. ಘಟನೆಯ ತನಿಖಾ ವರದಿ ನೀಡುವಂತೆ ಹೈಕೋರ್ಟ್ ಈ ಹಿಂದೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ ಕಾರ್ಯನಿರ್ವಾಹಕ ಎಂಜಿನಿಯರ್ ವರದಿ ಸಲ್ಲಿಸಿದ್ದರು. ಆದರೆ "ಯಾವುದೇ ತನಿಖೆ ನಡೆಸದೆ ವರದಿ ಸಲ್ಲಿಸಲಾಗಿದೆ. ಅದಕ್ಕೆ ಯಾವುದೇ ಆಧಾರವಿಲ್ಲ" ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿಂದೆ ನೀಡಲಾದ ಮಧ್ಯಂತರ ನಿರ್ದೇಶನಗಳಿಗೆ ಪ್ರತಿಕ್ರಿಯೆಯಾಗಿ ಸರ್ಕಾರ ತನ್ನ ವರದಿ ಸಲ್ಲಿಸಿದೆ ಎಂದು ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ತಿಳಿಸಲಾಯಿತು. ಮಾರ್ಚ್ 16ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ. ಕಳೆದ ಡಿಸೆಂಬರ್‌ನಲ್ಲಿ ನ್ಯಾಯಾಲಯ ಪೌರಕಾರ್ಮಿಕರನ್ನು ಬಳಸಿ ಮಲದಗುಂಡಿ ಸ್ವಚ್ಛಗೊಳಿಸುವುದನ್ನು ʼಅತ್ಯಂತ ಅಮಾನವೀಯʼ ಎಂದು ಖಂಡಿಸಿತ್ತು.

Related Stories

No stories found.
Kannada Bar & Bench
kannada.barandbench.com