ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ತಮಿಳುನಾಡಿನೊಂದಿಗೆ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.
ಪ್ರಕರಣ ಸಂಬಂಧ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ಅದರ ಸಂಬಂಧ 5ನೇ ಎಸಿಎಂಎಂ ನ್ಯಾಯಾಲಯದ ಮುಂದಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠವು ಪ್ರಕರಣಕ್ಕೆ ತಡೆ ನೀಡಿತು. ಅಲ್ಲದೆ ಪ್ರತಿವಾದಿಗಳಾದ ಕಾಟನ್‌ಪೇಟೆ ಪೊಲೀಸರು ಹಾಗೂ ದೂರು ದಾಖಲಿಸಿದ್ದ ಚುನಾವಣಾ ನೀತಿ ಸಂಹಿತೆ ಸಂಚಾರಿ ದಳದ ಅಧಿಕಾರಿ ಎಂ ಎನ್ ಶಿವರಾಜು ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಶೋಭಾ ಕರಂದ್ಲಾಜೆ ಪರ ವಕೀಲ ವೆಂಕಟೇಶ್ ದಳವಾಯಿ ಅವರು, ಈಚೆಗೆ ನಗರ್ತಪೇಟೆಯಲ್ಲಿ ನಡೆದ ಘಟನೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅರ್ಜಿದಾರರು, ಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಬಾಂಬ್ ಸ್ಪೋಟಿಸಿ ಹೋಗುತ್ತಾನೆ, ಮತ್ತೊಬ್ಬ ಕೇರಳದಿಂದ ಬಂದು ಆ್ಯಸಿಡ್ ದಾಳಿ ನಡೆಸುತ್ತಾನೆ, ಇನ್ನೊಬ್ಬ ದೆಹಲಿಯಿಂದ ಬಂದು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ ಎಂದು ಹೇಳಿದ್ದರು. ಅದಕ್ಕೆ, ಇದು ದೇಶದ ಜನರ ನಡುವೆ ದ್ವೇಷ ಹುಟ್ಟು ಹಾಕುವಂತಹದ್ದು, ಸಮುದಾಯಗಳ ನಡುವೆ ಕೋಮು ಪ್ರಚೋದನೆ ನೀಡುವಂತಹದ್ದು ಎಂದು ದೂರಿನಲ್ಲಿ ಹೇಳಲಾಗಿದೆ. ಆದರೆ, ಭಾಷಣದಲ್ಲಿ ಯಾವುದೇ ಧರ್ಮ, ಜಾತಿ, ಪಂಗಡವನ್ನು ಉಲ್ಲೇಖಿಸಲಾಗಿಲ್ಲ ಎಂದು ವಾದಿಸಿದರು.
ಎಫ್‌ಐಆರ್ ದಾಖಲಿಸುವ ಮೊದಲು ದೂರುದಾರರು ಪ್ರಾಥಮಿಕ ತನಿಖೆ ನಡೆಸಬೇಕಿತ್ತು. ಆದ್ದರಿಂದ, ಇದೊಂದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಎಫ್‌ಐಆರ್ ದಾಖಲಿಸಿರುವುದು ಕಾನೂನಿನ ದುರ್ಬಳಕೆಯಾಗಿದೆ. ಹಾಗಾಗಿ, ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿದರು.
ಪ್ರಕರಣದ ಹಿನ್ನೆಲೆ: ಕೆಲ ದಿನದ ಹಿಂದೆ ನಗರ್ತಪೇಟೆಯಲ್ಲಿ ಯುವಕರ ನಡುವೆ ಹೊಡೆದಾಟ ನಡೆದಿತ್ತು. ಇದು ಮತೀಯ ಸ್ವರೂಪ ಪಡೆದುಕೊಂಡಿತ್ತು. ಈ ಸಂಬಂಧ ಬಿಜೆಪಿಯು ನಡೆಸಿದ ಪ್ರತಿಭಟನೆ ವೇಳೆ 'ತಮಿಳುನಾಡಿನಿಂದ ನಗರಕ್ಕೆ ಬಂದು ಬಾಂಬ್ ಸ್ಫೋಟ ಮಾಡ್ತಾರೆ' ಎಂದು ಹಾಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಇಳಿದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಇದನ್ನು ತಮಿಳುನಾಡು ಸಿಎಂ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದ ಬೆನ್ನಿಗೇ ಡಿಎಂಕೆಯು ಶೋಭಾ ವಿರುದ್ಧ ದೂರು ದಾಖಲಿಸಿತ್ತು. ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿತ್ತು. ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದರು.
ಈ ಮಧ್ಯೆ, ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು. ಅದರಂತೆ, ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 123 (3A), 125 ಮತ್ತು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (3) ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಅದನ್ನು ರದ್ದುಪಡಿಸುವಂತೆ ಶೋಭಾ ಕರಂದ್ಲಾಜೆ ಹೈಕೋರ್ಟ್ ಮೆಟ್ಟಿಲೇರಿದ್ದರು.