ಪಿಎಫ್‌ಐ ನಿಷೇಧ: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರಿನ ನಿವಾಸಿ, ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಅಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ. ವಿಸ್ತೃತ ಆದೇಶವು ಇನ್ನಷ್ಟೇ ಲಭ್ಯವಾಗಬೇಕಿದೆ.
PFI and Karnataka HC
PFI and Karnataka HC

ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ.

ಬೆಂಗಳೂರಿನ ನಿವಾಸಿ, ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಅಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ. ವಿಸ್ತೃತ ಆದೇಶವು ಇನ್ನಷ್ಟೇ ಲಭ್ಯವಾಗಬೇಕಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ಅವರು “ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) 1967ರ ಸೆಕ್ಷನ್‌ 3, ಉಪ ನಿಯಮ 3ರ ಅಡಿ ಪಿಎಫ್‌ಐ ನಿಷೇಧಿಸಿರುವುದು ಕಾನೂನು ಬಾಹಿರ. ಪಿಎಫ್‌ಐ ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮ. ಕಾನೂನುಬಾಹಿರ ಸಂಘಟನೆ ಎಂದು ಘೋಷಿಸುವುದಕ್ಕೆ ಮತ್ತು ಆ ನಿಷೇಧ ತಕ್ಷಣದಿಂದಲೇ ಅನ್ವಯಿಸಿರುವುದಕ್ಕೆ ಪ್ರತ್ಯೇಕ ಕಾರಣ ಆದೇಶದಲ್ಲಿ ತಿಳಿಸಿಲ್ಲ” ಎಂದು ಆಕ್ಷೇಪಿಸಿದ್ದರು.

“ಪಿಎಫ್‌ಐಗೆ ತನ್ನ ವಾದ ಮಂಡನೆಗೆ ಕಾಲಾವಕಾಶ ನೀಡದೇ ಏಕಾಏಕಿ ನಿಷೇಧ ಆದೇಶ ಮಾಡಲಾಗಿದೆ. ಯುಎಪಿಎ ಕಾಯಿದೆಗೆ ವಿರುದ್ಧವಾಗಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು” ಎಂದು ಕೋರಿದ್ದರು.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಪಿಎಫ್‌ಐ ಸಂಘಟನೆ ದೇಶ ವಿರೋಧಿ ಕೃತ್ಯಗಳನ್ನು ನಡೆಸುತ್ತಿತ್ತು. ಅದು ಭಯೋತ್ಪಾದಕ ಸಂಘಟನೆಗಳ ಕೈ ಜೋಡಿಸಿ ದೇಶದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿತ್ತು. ಜೊತೆಗೆ ಸಂಘಟನೆಯ ಸದಸ್ಯರು ರಾಷ್ಟ್ರದಲ್ಲಿ ಭೀತಿಯ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ನಿಷೇಧವನ್ನು ಸಮರ್ಥಿಸಿದ್ದರು.

Also Read
ಪಿಎಫ್‌ಐ ನಿಷೇಧ: ಕೇಂದ್ರ ಸರ್ಕಾರದಿಂದ ಸಮರ್ಥನೆ, ಆದೇಶ ಕಾಯ್ದಿರಿಸಿದ ಹೈಕೋರ್ಟ್‌

“ಎಲ್ಲ ಆಧಾರಗಳನ್ನು ಸಂಗ್ರಹ ಮಾಡಿದ ನಂತರವೇ ಸಕಾರಣವಾಗಿಯೇ ಪಿಎಫ್‌ಐ ನಿಷೇಧಿಸಲಾಗಿದೆ. ಇದರಲ್ಲಿ ಕಾನೂನು ಬಾಹಿರವಾದುದೇನೂ ಇಲ್ಲ” ಎಂದಿದ್ದರು.

ಕೇಂದ್ರ ಸರ್ಕಾರ ಕಳೆದ ಸೆಪ್ಟೆಂಬರ್‌ 28ರಂದು ಐದು ವರ್ಷಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ದೇಶವ್ಯಾಪಿ ಪಿಎಫ್‌ಐ ಸಂಘಟನೆಯ ಕಚೇರಿ ಮತ್ತು ಅದರ ಸದಸ್ಯರ ನಿವಾಸಗಳ ಮೇಲೆ ದಾಳಿ ನಡೆಸಿದ್ದ ನಂತರ ಕೇಂದ್ರ ಸರ್ಕಾರ ನಿಷೇಧ ಆದೇಶ ಹೊರಡಿಸಿತ್ತು.

Related Stories

No stories found.
Kannada Bar & Bench
kannada.barandbench.com