ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್‌

ಕೋವಿಡ್‌ ಸಾಂಕ್ರಾಮಿಕತೆಯ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಎಸ್‌ ವಿ ಸಿಂಗ್ರೇಗೌಡ ಎಂಬವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಹಂಚಾಟೆ ಸಂಜೀವ್‌ಕುಮಾರ್‌ ನೇತೃತ್ವದ ಪೀಠ ವಜಾ ಮಾಡಿದೆ.
Karnataka High Court, SSLC Examination 2021
Karnataka High Court, SSLC Examination 2021
Published on

ಜುಲೈ 19 ಮತ್ತು 20ರಂದು 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ.

ಕೋವಿಡ್‌ ಸಾಂಕ್ರಾಮಿಕತೆಯ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಎಸ್‌ ವಿ ಸಿಂಗ್ರೇಗೌಡ ಎಂಬವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಹಂಚಾಟೆ ಸಂಜೀವ್‌ಕುಮಾರ್‌ ನೇತೃತ್ವದ ವಿಭಾಗೀಯ ಪೀಠ ವಜಾ ಮಾಡಿದೆ.

ಎರಡು ದಿನ ಪರೀಕ್ಷೆ ನಡೆಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂಬ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರ ವಾದವನ್ನು ನ್ಯಾಯಾಲಯ ಪರಿಗಣಿಸಿದೆ. ʼಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಮಾತ್ರ ಇರಲಿದ್ದಾರೆ. ಒಂದು ಡೆಸ್ಕ್‌ನಲ್ಲಿ ಒಬ್ಬರೇ ವಿದ್ಯಾರ್ಥಿ ಕುಳಿತು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ, ಆರೋಗ್ಯ ತಪಾಸಣೆ ಮತ್ತು ಪ್ಯಾರಾಮೆಡಿಕಲ್‌ ಸಿಬ್ಬಂದಿಯನ್ನು ನಿಯೋಜಿಸಲಾಗುವುದುʼ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದರು.

ರಾಜ್ಯ ಸರ್ಕಾರದ ವಾದವನ್ನು ಒಪ್ಪಿದ ನ್ಯಾಯಾಲಯವು ಅರ್ಜಿಯನ್ನು ವಜಾ ಮಾಡಿತು. “ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ಬಯಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮಧ್ಯಸ್ಥಗಾರರು ಅನುಸರಿಸಬೇಕಾದ ಸುತ್ತೋಲೆಯ ರೂಪದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡುವ ಮೂಲಕ ಪರೀಕ್ಷೆಯನ್ನು ನಡೆಸಲು ರಾಜ್ಯವು ಕಾಳಜಿ ವಹಿಸಿದೆ ಎಂಬುದು ನಮಗೆ ಅರ್ಥವಾಗಿದೆ. ಸರ್ಕಾರ ಹೇಗೆ ಸ್ವೇಚ್ಛೆಯಿಂದ ಪರೀಕ್ಷೆ ನಡೆಸುತ್ತಿದೆ ಎಂಬುದರತ್ತ ಅರ್ಜಿದಾರರು ಬೆರಳು ಮಾಡಿ ತೋರಿಸಿಲ್ಲ. ಹೀಗಾಗಿ, ಅರ್ಜಿಯಲ್ಲಿ ಯಾವುದೇ ಮಹತ್ವ ಕಾಣುತ್ತಿಲ್ಲ. ಇದರಿಂದ ಮನವಿ ವಜಾ ಮಾಡಲಾಗಿದೆʼʼ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಕೆಲವು ಸಂಸ್ಥೆಗಳಲ್ಲಿ ಸರಿಯಾದ ರೀತಿಯಲ್ಲಿ ಆನ್‌ಲೈನ್‌ ತರಗತಿಗಳನ್ನು ನಡೆಸಿಲ್ಲ. ಹಲವು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಯಲ್ಲಿ ವಿವಿಧ ವಿಷಯಗಳನ್ನು ಅರ್ಥೈಸಿಕೊಳ್ಳಲು ಕಷ್ಟವಾಗಿದೆ ಎಂದು ಅರ್ಜಿದಾರರು ಮನವಿಯಲ್ಲಿ ವಿವರಿಸಿದ್ದರು. ಗ್ರಾಮೀಣ ಪ್ರದೇಶದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ತರಗತಿ ನಡೆಸಲು ವ್ಯವಸ್ಥೆ ಇಲ್ಲ. ಕೆಲವು ಪ್ರದೇಶಗಳಲ್ಲಿ ಒಂದೇ ಒಂದು ತರಗತಿ ನಡೆಸಿಲ್ಲ. ಹೀಗಾಗಿ, ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ವಾದಿಸಲಾಗಿತ್ತು.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ, ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ನಿಲುವಿನ ಹಿನ್ನೆಲೆಯಲ್ಲಿ ಈ ಮನವಿಗೆ ಹೆಚ್ಚಿನ ಮಹತ್ವ ಬಂದಿತ್ತು.

Also Read
ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸಲು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲೇನಿದೆ?

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸು ಮಾಡಲು ಅನುಸರಿಸಿದ ಮಾನದಂಡವನ್ನೇ ಅನುಸರಿಸಿ ಪೂರ್ವಸಿದ್ಧತಾ ಪರೀಕ್ಷೆ ಅಥವಾ 9ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಪಾಸು ಮಾಡಬೇಕು ಎಂದು ಮನವಿ ಮಾಡಲಾಗಿತ್ತು.

1 ರಿಂದ 18 ವಯೋಮಾನದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿಲ್ಲ. ರಾಜ್ಯದಲ್ಲಿ ಕೋವಿಡ್‌ನ ನೂತನ ಡೆಲ್ಟಾ ಪ್ಲಸ್‌ ವೈರಾಣು ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಪರೀಕ್ಷೆಯ ನೆಪದಲ್ಲಿ ಮಕ್ಕಳನ್ನು ವೈರಾಣುವಿಗೆ ಮುಖಾಮುಖಿಯಾಗಿಸಲಾಗದು ಎಂದು ಅರ್ಜಿದಾರರು ವಾದಿಸಿದ್ದರು.

ʼಹಲವು ಪೋಷಕರು ಒಂದೇ ಮಗುವನ್ನು ಹೊಂದಿದ್ದಾರೆ. ಆ ಮಗುವಿಗೆ ಏನಾದರೂ ಆದರೆ ಆ ಮಗುವಿನ ಜೀವವನ್ನು ಸರ್ಕಾರ ಮರಳಿ ನೀಡುವುದೇ? ಇದನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯನ್ನು ರದ್ದುಗೊಳಿಸುವುದು ಅಗತ್ಯʼ ಎಂದು ಕೋರಲಾಗಿತ್ತು.

Kannada Bar & Bench
kannada.barandbench.com