ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ತಿಂಗಳ ಕಾಲಾವಕಾಶ ನೀಡಿದ ಹೈಕೋರ್ಟ್‌

ರಾಜ್ಯದ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಅವಧಿ ಈಗಾಗಲೇ ಪೂರ್ಣಗೊಂಡಿದ್ದು, ಇವುಗಳಿಗೆ ಚುನಾವಣೆ ನಡೆಸಲು ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ ಆಯೋಗದ ವಕೀಲರು.
Karnataka High Court
Karnataka High Court
Published on

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆಯಲು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸುವ ಸಂಬಂಧ ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವ ಕ್ರಮ ಪ್ರಶ್ನಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯಿದೆ- 2021 ಜಾರಿಗೆ ಸೆಪ್ಟೆಂಬರ್‌ 18ರಂದು ಸರ್ಕಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದಂತೆಯೇ ಸರ್ಕಾರದ ಪರ ವಕೀಲರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅರ್ಜಿಯ ಕಳೆದ ವಿಚಾರಣೆ ವೇಳೆಯೇ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆಯಲ್ಲವೇ ಎಂದು ಪೀಠವು ಪ್ರಶ್ನಿಸಿತು.

ಸರ್ಕಾರದ ಪರ ವಕೀಲೆ ವಾಣಿ ಎಚ್‌ ಅವರು “ಅರ್ಜಿಯಲ್ಲಿ ಕಾಯಿದೆಯ ಸಿಂಧುತ್ವ ಪ್ರಶ್ನಿಸಲಾಗಿದೆ. ಈ ಬಗ್ಗೆ ವಿವರವಾದ ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶದ ಅಗತ್ಯವಿದೆ” ಎಂದರು.

Also Read
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು “ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳ ಅವಧಿ ಈಗಾಗಲೇ ಪೂರ್ಣಗೊಂಡಿದ್ದು, ಇವುಗಳಿಗೆ ಚುನಾವಣೆ ನಡೆಸಲು ಆಯೋಗ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಆಯೋಗ ಎಲ್ಲ ಕ್ರಮ ಕೈಗೊಂಡ ನಂತರ ಸರ್ಕಾರ ಕಾಯಿದೆಗೆ ತಿದ್ದುಪಡಿ ತಂದಿದೆ. ಇದರಿಂದ, ಆಯೋಗದ ಎಲ್ಲ ಸಿದ್ಧತೆಗಳೂ ವ್ಯರ್ಥವಾಗಲಿವೆ” ಎಂದು ಪೀಠದ ಗಮನ ಸೆಳೆದರು.

ವಾದ-ಪ್ರತಿವಾದ ಆಲಿಸಿದ ಪೀಠವು ಸರ್ಕಾರ ಮೊದಲು ಆಕ್ಷೇಪಣೆ ಸಲ್ಲಿಸಲಿ. ಆನಂತರ ವಿಚಾರಣೆ ನಡೆಸುವುದಾಗಿ ತಿಳಿಸಿತಲ್ಲದೆ, ನಾಲ್ಕು ವಾರಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿತು.

Kannada Bar & Bench
kannada.barandbench.com