Karnataka High Court
Karnataka High Court

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯಿದೆ-2021 ಅನ್ನು ರೂಪಿಸಿದ್ದು, ಅದಕ್ಕೆ ರಾಜ್ಯಪಾಲರ ಅಂಕಿತ ಹಾಕಿದ ಹಿನ್ನೆಲೆಯಲ್ಲಿ 2021ರ ಸೆಪ್ಟೆಂಬರ್‌ 18ರಂದು ಗೆಜೆಟ್ ನೋಟಿಫಿಕೇಷನ್ ಪ್ರಕಟಿಸಲಾಗಿದೆ ಎಂದು ತಿಳಿಸಿದ ಆಯೋಗ.
Published on

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಸೋಮವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ ಕಾರ್ಯದರ್ಶಿ ಮತ್ತು ರಾಜ್ಯ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ಪ್ರತಿಕ್ರಿಯಿಸಲು ಆದೇಶಿಸಿದೆ.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು “ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಅವಧಿಯು ಪ್ರಸಕ್ತ ವರ್ಷದಲ್ಲಿ ಮುಗಿದಿದೆ. ಹೀಗಾಗಿ, ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಕಳೆದ ಮಾರ್ಚ್‌ 30ರಂದು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ, ಜೂನ್‌ 28ರಂದು ಅಂತಿಮ ಮತದಾರರ ಪಟ್ಟಿ ಮತ್ತು ಜುಲೈ 1ರಂದು ಕರಡು ಮೀಸಲು ಪಟ್ಟಿ ಪ್ರಕಟಿಸಿತ್ತು. ತಕರಾರು ಅರ್ಜಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶದಿಂದ ಅಂತಿಮ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಪ್ರಕಟಿಸುವುದು ಬಾಕಿ ಇತ್ತು” ಎಂದು ಪೀಠಕ್ಕೆ ತಿಳಿಸಿದರು.

Also Read
ರಾಜ್ಯ ಭದ್ರತಾ ಆಯೋಗ ರಚನೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್‌

ಈ ಮಧ್ಯೆ, ರಾಜ್ಯ ಸರ್ಕಾರವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯಿದೆ-2021 ಅನ್ನು ರೂಪಿಸಿದ್ದು, ಅದಕ್ಕೆ ರಾಜ್ಯಪಾಲರ ಅಂಕಿತ ಹಾಕಿದ ಹಿನ್ನೆಲೆಯಲ್ಲಿ 2021ರ ಸೆಪ್ಟೆಂಬರ್‌ 18ರಂದು ಗೆಜೆಟ್ ನೋಟಿಫಿಕೇಷನ್ ಪ್ರಕಟಿಸಲಾಗಿದೆ. ತಿದ್ದುಪಡಿ ಕಾಯಿದೆಯಿಂದ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ವಾಪಸ್ ಪಡೆಯಲಾಗಿದೆ. ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಿಗದಿಪಡಿಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಸೀಮಾ ಆಯೋಗ ರಚನೆ ಮಾಡಲು ಸರ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ರಾಜ್ಯ ಸರ್ಕಾರದ ಈ ಕ್ರಮ ಪಂಚಾಯತಿ ಕಚೇರಿಗಳ ಅಧಿಕಾರವಧಿ ಪೂರ್ಣಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕೆಂಬುದನ್ನು ಪ್ರತಿಪಾದಿಸುವ ಸಂವಿಧಾನದ ಪರಿಚ್ಛೇದ 243 ಇ(3)ರ ಸ್ಪಷ್ಟ ಉಲ್ಲಂಘನೆಯಾಗಿದೆ. ಆಯೋಗ ಹೊರಡಿಸಿದ ನೋಟಿಫಿಕೇಷನ್‌ಗಳು ತಿದ್ದುಪಡಿ ಕಾಯಿದೆ ಜಾರಿಯಿಂದ ರದ್ದಾಗಿದ್ದು, ಹೊಸ ಪ್ರಕ್ರಿಯೆ ಕೈಗೊಂಡು ಚುನಾವಣೆ ಪೂರ್ಣಗೊಳಿಸಲು ಕನಿಷ್ಠ ಒಂದು ಅಥವಾ ಒಂದೂವರೆ ವರ್ಷ ಬೇಕಾಗುತ್ತದೆ. ಆದ್ದರಿಂದ ತಿದ್ದುಪಡಿ ಕಾಯಿದೆಯನ್ನು ರದ್ದುಪಡಿಸಬೇಕು. ಅಂತಿಮ ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿ ಪ್ರಕಟಿಸಿ ಶೀಘ್ರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com