ಕೊಲ್ಲೂರು ಮೂಕಾಂಬಿಕಾ ದೇವಾಲಯ ಸಮೀಪ ಹೆದ್ದಾರಿಗೆ ಭೂ ಸ್ವಾಧೀನ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್‌ ನಿರ್ದೇಶನ

ದೇವಾಲಯ ಸುತ್ತಲಿನ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಎಂದು ನ್ಯಾಯಾಲಯವನ್ನು ಕೋರಲಾಗಿದೆ.
Karnataka High Court
Karnataka High Court

ಉಡುಪಿ ಜಿಲ್ಲೆಯಲ್ಲಿರುವ ರಾಜ್ಯದ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂ ಸ್ವಾಧೀನ ಪಡಿಸಿಕೊಳ್ಳುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನಿರ್ದೇಶಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ ಮಧ್ಯಂತರ ಆದೇಶ ಮಾಡಿದೆ.

ದೇವಾಲಯ ಸುತ್ತಲಿನ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಗುರು ಪ್ರಸಾದ್ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ.

ಅರ್ಜಿದಾರರ ಪರ ವಕೀಲ ವೆಂಕಟೇಶ್‌ ದಳವಾಯಿ ಅವರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ದೇವಾಲಯ ಸುತ್ತಲಿನ ಸರ್ವೇ ನಂಬರ್‌ 12ರಲ್ಲಿ ಭೂಮಿ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಈ ಯೋಜನೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ ಮೂರು ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು ಹದಿನೈದು ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲದ ಕಟ್ಟಡಕ್ಕೆ ಅಪಾಯಕ್ಕೆ ಸಿಲುಕಲಿದೆ ಎಂದು ಪೀಠಕ್ಕೆ ವಿವರಿಸಿದರು.

ಈ ವಾದ ಪರಿಗಣಿಸಿದ ಪೀಠವು ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸೂಚಿಸಿದೆ.

ಪ್ರಕರಣದ ಹಿನ್ನೆಲೆ: ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ದೇವಾಲಯ ಸುತ್ತಲಿನ ಸರ್ವೇ ನಂ 12ರಲ್ಲಿನ ಜಮೀನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು 2023ರ ಅಕ್ಟೋಬರ್‌ 10 ರಂದು ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಗೆ ಆಕ್ಷೇಪಿಸಿ ತಾವು 2023ರ ಅಕ್ಟೋಬರ್‌ 26ರಂದು ಸಲ್ಲಿಸಿರುವ ಮನವಿ ಪತ್ರವನ್ನು ಸಚಿವಾಲಯ ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಅಧಿಸೂಚನೆ ಪ್ರಕಾರ ದೇವಸ್ಥಾನದ ಸಮೀಪದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಈ ಮಾರ್ಗದಲ್ಲಿ ನಿತ್ಯ 15 ಸಾವಿರಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತದೆ. ಇದರಿಂದ ದೇವಸ್ಥಾನದ ಕಟ್ಟಡಕ್ಕೆ ಅಪಾಯ ಒದಗಲಿದೆ. ಗರ್ಭಗುಡಿ ಕಂಪಿಸಲಿದೆ. ಹಾಗೆಯೇ, ದೇವಸ್ಥಾನದ ಧಾರ್ಮಿಕ ರಥೋತ್ಸವ ನೇರವೇರಿಸಲು ಅಡ್ಡಿ ಸೇರಿದಂತೆ ಅನೇಕ ಸಮಸ್ಯೆ ಉಂಟಾಗಲಿವೆ. ಹೀಗಾಗಿ, ಸಚಿವಾಲಯದ ಅಧಿಸೂಚನೆ ರದ್ದುಪಡಿಸಬೇಕು. ದೇವಾಲಯದ ಪಕ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿರ್ಬಂಧ ಹೇರಬೇಕು. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಪರ್ಯಾರ್ಯ ಮಾರ್ಗ ಕಂಡುಕೊಳ್ಳುವಂತೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Related Stories

No stories found.
Kannada Bar & Bench
kannada.barandbench.com