ಎಚ್‌ಡಿಕೆ ವಿರುದ್ಧದ ಭೂಕಬಳಿಕೆ ಪ್ರಕರಣ: ಕಂದಾಯ ಇಲಾಖೆ ಕಾರ್ಯದರ್ಶಿ ಅಫಿಡವಿಟ್‌ಗೆ ಹೈಕೋರ್ಟ್‌ ಅತೃಪ್ತಿ

ಒತ್ತುವರಿಯಾದ 14 ಎಕರೆ 4 ಗುಂಟೆ ಭೂಮಿಯನ್ನು 8 ಎಕರೆ 30 ಗುಂಟೆಗೆ ಇಳಿಸಿರುವುದಕ್ಕೆ ಸಂಬಂಧಿಸಿದ ದಾಖಲೆ, ಅಫಿಡವಿಟ್‌ನಲ್ಲಿ ಉಲ್ಲೇಖಿಸದ ಸರ್ವೆ ನಂಬರ್‌ಗಳ ಕುರಿತಾದ ಮಾಹಿತಿಯನ್ನು ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಆದೇಶಿಸಿರುವ ನ್ಯಾಯಾಲಯ.
HD Kumaraswamy Karnataka HC
HD Kumaraswamy Karnataka HC

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಗಳಾದ ಮದ್ದೂರು ಶಾಸಕ ಡಿ ಸಿ ತಮ್ಮಣ್ಣ ಹಾಗೂ ಸಾವಿತ್ರಮ್ಮ ವಿರುದ್ಧ ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರದ ಭೂಮಿ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಕಾರ್ಯದರ್ಶಿ ಸಲ್ಲಿಸಿರುವ ಅಫಿಡವಿಟ್‌ಗೆ ಈಚೆಗೆ ಕರ್ನಾಟಕ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಎಸ್‌ ಆರ್‌ ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಕೆ ರಾಜೇಶ್‌ ರೈ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

“ಕಂದಾಯ ಇಲಾಖೆ ಕಾರ್ಯದರ್ಶಿ ಅಫಿಡವಿಟ್‌ನಲ್ಲಿ ಉಲ್ಲೇಖಿಸಿರುವ ವಿಚಾರಗಳು ಮತ್ತು ಅದನ್ನು ಸಲ್ಲಿಸಿರುವ ರೀತಿಯು ನಮಗೆ ಸಮಾಧಾನ ಉಂಟು ಮಾಡಿಲ್ಲ” ಎಂದು ಆದೇಶದಲ್ಲಿ ನ್ಯಾಯಾಲಯ ಹೇಳಿದೆ.

“ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಿರುವ ಸರ್ವೆ ನಂಬರ್‌ಗಳಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ ಅವರು ಹೊರಡಿಸಿರುವ ತೆರವು ನೋಟಿಸ್‌, ಸರ್ಕಾರದ ಭೂಮಿ ಒತ್ತುವರಿ ಮಾಡಿಕೊಂಡಿರುವುದರ ಕುರಿತಾದ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ ಮಾಡಿರುವ ಆದೇಶ, ಉಪವಿಭಾಗಾಧಿಕಾರಿ ಆದೇಶವನ್ನು ಎತ್ತಿ ಹಿಡಿದಿರುವ ಜಿಲ್ಲಾಧಿಕಾರಿಯ ಆದೇಶ, ಗೋಮಾಳ ಒತ್ತುವರಿ ತೆರವಿನ ಬಳಿಕ ಮಹಜರ್‌ ನಡೆಸಿ, ಅದನ್ನು ವಶಕ್ಕೆ ಪಡೆದಿರುವುದು ಮತ್ತು ಅದನ್ನು ವಶಕ್ಕೆ ಪಡೆದಿರುವ ವರದಿಗಳು, 14 ಎಕರೆ 4 ಗುಂಟೆ ಭೂಮಿಯನ್ನು 8 ಎಕರೆ 30 ಗುಂಟೆಗೆ ಇಳಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳು, ಕಂದಾಯ ಇಲಾಖೆಯ ಕಾರ್ಯದರ್ಶಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಉಲ್ಲೇಖಿಸದ ಸರ್ವೆ ನಂಬರ್‌ಗಳ ಕುರಿತಾದ ಮಾಹಿತಿಯನ್ನು ಸಲ್ಲಿಸಬೇಕು” ಎಂದು ನ್ಯಾಯಾಲಯವು ಸರ್ಕಾರಕ್ಕೆ ಆದೇಶಿಸಿದೆ.

Justices B Veerappa and Rajesh Rai K
Justices B Veerappa and Rajesh Rai K

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ 7, 8, 9, 10, 16, 17 ಮತ್ತು 79ರ ಸರ್ವೆ ನಂಬರ್‌ಗಳಲ್ಲಿನ ಜಮೀನು ಪರಿಶೀಲಿಸಿ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್‌ ಅವರು ಕೆಲವು ವಿಚಾರಗಳು ಮತ್ತು ವಾಸ್ತವಿಕ ಅಂಶಗಳನ್ನು ದಾಖಲಿಸಿದ್ದಾರೆ ಎಂದು 2023ರ ಫೆಬ್ರವರಿ 6ರಂದು ನ್ಯಾಯಾಲಯಕ್ಕೆ ಸಲ್ಲಿಸಲಾದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅಫಿಡವಿಟ್‌ನಲ್ಲಿ ಸರ್ವೆ ನಂಬರ್‌ 79 ಹೊರತುಪಡಿಸಿ ಕೇವಲ ಆರು ಸರ್ವೆ ನಂಬರ್‌ಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. 8, 9, 10, 16 ಮತ್ತು 79ರ ಸರ್ವೆ ನಂಬರ್‌ಗಳಲ್ಲಿ ಒಟ್ಟು 14 ಎಕರೆ 4 ಗುಂಟೆ ಇದೆ ಎಂದು ಹೇಳಲಾಗಿದೆ. ಸರ್ಕಾರದ ಭೂಮಿ ಒತ್ತುವರಿ ತೆರವು ಮಾಡುವಂತೆ ತಹಶೀಲ್ದಾರ್‌ ಅವರು ಒತ್ತುವರಿ ಮಾಡಿಕೊಂಡಿರುವವರಿಗೆ ನೋಟಿಸ್‌ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಒತ್ತುವರಿದಾರರು ಉಪವಿಭಾಗಧಿಕಾರಿ ಅವರಿಗೆ ಮೇಲ್ಮನವಿ ಸಲ್ಲಿಸಿದ್ದು, ಇದನ್ನು ವಜಾ ಮಾಡಿ, 14 ಎಕರೆ 4 ಗುಂಟೆ ಜಮೀನು ಒತ್ತುವರಿ ಮಾಡಲಾಗಿದೆ ಎಂದು ಹೇಳಲಾಗಿದೆ. ಉಪವಿಭಾಗಾಧಿಕಾರಿಯ ಆದೇಶವನ್ನು ಜಿಲ್ಲಾಧಿಕಾರಿ ಎತ್ತಿ ಹಿಡಿದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ವಿವರಿಸಲಾಗಿದೆ.

ವಿಶೇಷವೆಂದರೆ ರಾಮನಗರದ ಅಬ್ಬನಕುಪ್ಪೆಯ ಸಂಪತ್‌ ಎಂಬುವರು ಲೋಕಾಯುಕ್ತರಿಗೆ ಸಲ್ಲಿಸಿರುವ ದೂರನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ. ಮುಂದುವರಿದು, ದೂರನ್ನು ಪರಿಶೀಲಿಸಿ, ಸರ್ಕಾರದ ಭೂಮಿಯನ್ನು ಒತ್ತುವರಿ ಮಾಡಿರುವುದನ್ನು ಸರ್ವೆ ಮಾಡಿ ಅದನ್ನು ತೆರವು ಮಾಡಲಾಗಿದೆ ಎಂದು ರಾಮನಗರ ಜಿಲ್ಲಾಧಿಕಾರಿಯು 2009ರ ಜನವರಿ 28ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಲೋಕಾಯುಕ್ತ ವರದಿಯಲ್ಲಿ ವಿವರಿಸಲಾಗಿರುವ ಬಗ್ಗೆ ಅಫಿಡವಿಟ್‌ನಲ್ಲಿ ದಾಖಲಿಸಲಾಗಿದೆ.

ಆದರೆ, ಅಫಿಡವಿಟ್‌ನಲ್ಲಿ 8, 9, 10, 16 ಮತ್ತು 17 ನಲ್ಲಿನ 8 ಎಕರೆ 30 ಗುಂಟೆಯ ಕುರಿತು ಉಲ್ಲೇಖಿಸಲಾಗಿದೆ. ಆದರೆ, ಲೋಕಾಯುಕ್ತ ವರದಿ ಮತ್ತು ಹೈಕೋರ್ಟ್‌ನ ವಿಭಾಗೀಯ ಪೀಠವು ಆದೇಶದಲ್ಲಿ ಉಲ್ಲೇಖಿಸಿರುವ ಇತರೆ ಸರ್ವೆ ನಂಬರ್‌ಗಳ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಒತ್ತುವರಿ ತೆರವು ಮಾಡಿದ ಬಳಿಕ ಸರ್ಕಾರವು ಮಹಜರ್‌ ನಡೆಸಿ, ಅದನ್ನು ತನ್ನ ವಶಕ್ಕೆ ಪಡೆದು, ಅದನ್ನು ಆರ್‌ಟಿಸಿಯಲ್ಲಿ ಉಲ್ಲೇಖಿಸಲಾಗಿದೆಯೇ ಎಂಬುದರ ಬಗ್ಗೆ ಅಫಿಡವಿಟ್‌ನಲ್ಲಿ ಬೆಳಕು ಚೆಲ್ಲಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

ಜನವರಿ 31ರಂದು ನ್ಯಾಯಾಲಯದ ಆದೇಶ ಪಾಲಿಸಲು ಸರ್ಕಾರಕ್ಕೆ ಅಂತಿಮವಾಗಿ ಒಂದು ವಾರ ಕಾಲಾವಕಾಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ಮುಖ್ಯ ಕಾರ್ಯದರ್ಶಿಯು ನ್ಯಾಯಾಲಯದ ಮುಂದೆ ಹಾಜರಾಗಬೇಕು. ಅವರ ವಿರುದ್ಧ ಆರೋಪ ನಿಗದಿಪಡಿಸಲಾಗುವುದು ಎಂದು ಪೀಠ ಹೇಳಿತ್ತು. ಈ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಫೆಬ್ರವರಿ 7ರಂದು ಕಂದಾಯ ಇಲಾಖೆಯ ಕಾರ್ಯದರ್ಶಿ ಎನ್‌ ಜಯರಾಂ ಅವರು ಸಲ್ಲಿಸಿರುವ ಅಫಿಡವಿಟ್‌ ಅನ್ನು ಸರ್ಕಾರದ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

Also Read
ಎಚ್‌ಡಿಕೆ ವಿರುದ್ಧದ ಭೂಕಬಳಿಕೆ ಪ್ರಕರಣ: ಮುಖ್ಯ ಕಾರ್ಯದರ್ಶಿ ವಿರುದ್ಧ ಆರೋಪ ನಿಗದಿಯ ಎಚ್ಚರಿಕೆ ನೀಡಿದ ಹೈಕೋರ್ಟ್‌

ಕುಮಾರಸ್ವಾಮಿ ಮತ್ತು ಅವರ ಇತರೆ ಕುಟುಂಬ ಸದಸ್ಯರು ಹತ್ತಾರು ಎಕರೆ ಗೋಮಾಳ ಒತ್ತುವರಿ ಮಾಡಿಕೊಂಡಿರುವುದರ ವಿರುದ್ಧ ವಿಸ್ತೃತ ತನಿಖೆ ನಡೆಸುವಂತೆ ಲೋಕಾಯುಕ್ತರು 2014ರ ಆಗಸ್ಟ್‌ 5ರಂದು ಕಂದಾಯ ಇಲಾಖೆಗೆ ನಿರ್ದೇಶಿಸಿದ್ದರು. ಕುಮಾರಸ್ವಾಮಿ, ಸಂಬಂಧಿಗಳಾದ ಸಾವಿತ್ರಮ್ಮ ಮತ್ತು ಡಿ ಸಿ ತಮ್ಮಣ್ಣ ಅವರು ತಮ್ಮ ಪ್ರಭಾವ ಬಳಸಿ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ. ಇವರೆಲ್ಲರೂ 110. 32 ಎಕರೆ ಪೈಕಿ ಸುಮಾರು 54 ಎಕರೆಯಷ್ಟು ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಂಸದರಾದ ಜಿ ಮಾದೇಗೌಡರು ನೀಡಿದ ದೂರನ್ನು ಆಧರಿಸಿ ಲೋಕಾಯುಕ್ತರು ಆದೇಶ ಮಾಡಿದ್ದರು.

ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಸರ್ವೆ ನಂ. 7, 8, 9, 10, 16, 17 ಮತ್ತು 79ರಲ್ಲಿ ಮಂಜೂರಾಗಿರುವ ಗೋಮಾಳದ ಕುರಿತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಸ್ತೃತ ತನಿಖೆ ನಡೆಸಬೇಕು. ಒಂದೊಮ್ಮೆ ಆ ಭೂಮಿ ಒತ್ತುವರಿಯಾಗಿದ್ದರೆ ಅದನ್ನು ಒತ್ತುವರಿ ಮಾಡಿಕೊಂಡಿರುವವರಿಂದ ಸರ್ಕಾರಿ ಭೂಮಿ ವಾಪಸ್‌ ಪಡೆಯಲು ಕಾನೂನಾತ್ಮಕ ಕ್ರಮಕೈಗೊಳ್ಳಬೇಕು. ಸರ್ಕಾರದ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿರುವವರು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕೈಗೊಳ್ಳಬೇಕು. ನಾಲ್ಕು ತಿಂಗಳಲ್ಲಿ ಈ ಕ್ರಮವಾಗಬೇಕು. ಆನಂತರ 15 ದಿನಗಳಲ್ಲಿ ರಿಜಿಸ್ಟ್ರಾರ್‌ಗೆ ಅನುಪಾಲನಾ ವರದಿ ಸಲ್ಲಿಸುವಂತೆ ಲೋಕಾಯುಕ್ತರು 2014ರ ಆಗಸ್ಟ್‌ 4ರಂದು ಆದೇಶಿಸಿದ್ದರು. ಇದನ್ನು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಎತ್ತಿ ಹಿಡಿದಿತ್ತು. ಈ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com