ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌: ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ 10.12.2024ರಂದು ನಡೆದ ಲಾಠಿ ಚಾರ್ಜ್‌ ಘಟನೆಯನ್ನು ವಿಚಾರಣಾ ಆಯೋಗಕ್ಕೆ ವಹಿಸುವಂತೆ ಪಂಚಮಸಾಲಿ ಹೋರಾಟಗಾರರು ವಾದಿಸಿದ್ದರು.
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌: ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಹೈಕೋರ್ಟ್‌ ಅಸ್ತು
Published on

ಬೆಳಗಾವಿಯ ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡುವಂತೆ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವ ಪ್ರಕರಣವನ್ನು ನ್ಯಾಯಾಂಗ ತನಿಖೆ ಬಿಟ್ಟು ಬೇರೆ ಯಾವುದೇ ತೆರನಾದ ತನಿಖೆಗೆ ನೀಡಲು ಕರ್ನಾಟಕ ಹೈಕೋರ್ಟ್‌ ಗುರುವಾರ ನಿರಾಕರಿಸಿದೆ. ಆದರೆ, ಏಕಸದಸ್ಯ ಪೀಠದ ಆದೇಶದಲ್ಲಿ ಕೆಲವು ಮಾರ್ಪಾಡು ಮಾಡಿ, ಮೇಲ್ಮನವಿ ಇತ್ಯರ್ಥಪಡಿಸಿದೆ.

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗವು ಮೂರು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಆರ್‌ ದೇವದಾಸ್‌ ಮತ್ತು ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠವು ಇತ್ಯರ್ಥಪಡಿಸಿದೆ.

Justices R Devdas & K V Aravind
Justices R Devdas & K V Aravind

ವಾದ-ಪ್ರತಿವಾದ ಆಲಿಸಿದ ವಿಭಾಗೀಯ ಪೀಠವು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬದಲಿಗೆ ಜಿಲ್ಲಾ ನ್ಯಾಯಾಂಗದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ವರದಿ ನೀಡುವ ಗಡುವನ್ನು ಮೂರು ತಿಂಗಳ ಬದಲಿಗೆ ಆರು ತಿಂಗಳಲ್ಲಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿದೆ. ವಿಸ್ತೃತವಾದ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಸಿ ಎಚ್‌ ಜಾಧವ್‌ ಅವರು ನ್ಯಾಯಾಂಗ ತನಿಖೆ ಹೊರತುಪಡಿಸಿ, ಅತ್ಯುನ್ನತ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವಾದಿಸಿದ್ದರು. ಸ್ವಾಮೀಜಿ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ನ್ಯಾಯಾಂಗ ತನಿಖೆ ಹೊರತುಪಡಿಸಿ, ಬೇರಾವುದೇ ತನಿಖೆಗೆ ಒಪ್ಪಲಾಗದು ಎಂದು ಪ್ರತಿಪಾದಿಸಿದ್ದರು. ವಕೀಲೆ ಪೂಜಾ ಸವದತ್ತಿ ಮತ್ತಿತರರು ಪ್ರತಿವಾದಿಗಳ ಪರವಾಗಿ. ವಾದಿಸಿದರು.

Also Read
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌: ತನಿಖಾ ಆಯೋಗ ರಚನೆ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ 10.12.2024ರಂದು ನಡೆದ ಲಾಠಿ ಚಾರ್ಜ್‌ ಘಟನೆಯನ್ನು ವಿಚಾರಣಾ ಆಯೋಗಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಾಗಲಕೋಟೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ 2025ರ ಏಪ್ರಿಲ್‌ 4ರಂದು ಪುರಸ್ಕರಿಸಿತ್ತು. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ಆಯೋಗ ರಚನೆಯಾದ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿ, ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.

Kannada Bar & Bench
kannada.barandbench.com