ಕಾನೂನುಬಾಹಿರವಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ಉದ್ಯಮ ನಡೆಸಲು ಪರವಾನಗಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಜಿ ಲಕ್ಷ್ಮಿನಾರಾಯಣ ರೆಡ್ಡಿ ಅವರು ಮುಂದಿನ ಬಾರಿ ವರ್ಚುವಲ್ ಕಲಾಪದಲ್ಲಿ ಭಾಗಿಯಾಗಬೇಕು. ಇದೇ ವೇಳೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ.
ಕಾನೂನುಬಾಹಿರವಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ಉದ್ಯಮ ನಡೆಸಲು ಪರವಾನಗಿ ನೀಡಿರುವುದನ್ನು ಪ್ರಶ್ನಿಸಿ ಸಮೀವುಲ್ಲಾ ಷರೀಪ್ ಅವರು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಮತ್ತು ವಲಯ ಆಯುಕ್ತರನ್ನು ಪ್ರತಿನಿಧಿಸಿದ್ದ ವಕೀಲ ಮೋಹನ್ ಭಟ್ ಅವರು “ಪಾಲಿಕೆ ಆಯುಕ್ತ ಲಕ್ಷ್ಮಿನಾರಾಯಣ ರೆಡ್ಡಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಕ್ವಾರಂಟೈನ್‌ನಲ್ಲಿದ್ದಾರೆ. ಆಕ್ಷೇಪಣೆ ಸಿದ್ಧವಾಗಿದ್ದು, ಮುಂದಿನ ವಿಚಾರಣೆಯ ವೇಳೆಗೆ ಸಲ್ಲಿಸಲಾಗುವುದು” ಎಂದು ಪೀಠಕ್ಕೆ ಮಾಹಿತಿ ನೀಡಿದರು.
ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿದ್ದು, ಅಂದು ಮೈಸೂರು ಪಾಲಿಕೆ ಆಯುಕ್ತರು ವರ್ಚುವಲ್ ಕಲಾಪದಲ್ಲಿ ಹಾಜರಾಗಬೇಕು ಎಂದು ಆದೇಶಿಸಿದೆ.
ಉದ್ಯಮ ನಡೆಸುವುದಕ್ಕೆ ಸಂಬಂಧಿಸಿದಂತೆ ಪರವಾನಗಿ ನೀಡುವಾಗ ವಲಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮೈಸೂರಿನ ಪರಿಸರ ಅಧಿಕಾರಿಯು ವಿಸ್ತೃತ ವರದಿ ಸಲ್ಲಿಸಿದ್ದಾರೆ. ತನಿಖಾ ವರದಿಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿನಾರಾಯಣ ರೆಡ್ಡಿ ಅವರು ಯಾವುದೇ ಕ್ರಮವಹಿಸಿಲ್ಲ. ನ್ಯಾಯಾಲಯದ ನಿರ್ದೇಶನದ ಹೊರತಾಗಿಯೂ ಆಯುಕ್ತರು ಆಕ್ಷೇಪಣೆ ಸಲ್ಲಿಸಿಲ್ಲ. ಹೀಗಾಗಿ, ಲಕ್ಷ್ಮಿನಾರಾಯಣ ರೆಡ್ಡಿ ಅವರು ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಈ ಹಿಂದಿನ ವಿಚಾರಣೆ ವೇಳೆ ಪೀಠವು ಆದೇಶಿಸಿತ್ತು.
ಈ ಹಿಂದೆ ಮೈಸೂರಿನಲ್ಲಿ ರಸ್ತೆ ಅತಿಕ್ರಮಣ ತೆರವಿಗೆ ಸಂಬಂಧಿಸಿದಂತೆ ಲಕ್ಷ್ಮಿನಾರಾಯಣ ರೆಡ್ಡಿ ಅವರು ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಿಕ ಆದೇಶ ಹೊರಡಿಸುವ ಮೂಲಕ ಸೇವೆಯಿಂದ ವಜಾ ಮಾಡುವ ಕಟುವಾದ ಎಚ್ಚರಿಕೆಯನ್ನು ಪೀಠವು ನೀಡಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.