ಲೋಕಸಭೆಗೆ ತಮ್ಮ ಅಯ್ಕೆಯನ್ನು ಅಸಿಂಧುಗೊಳಿಸಿರುವ ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಸಿಂಧು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ತಡೆ ನೀಡುವಂತೆ ಅವರು ಕೋರಿದ್ದರು.
ಪ್ರಜ್ವಲ್ ರೇವಣ್ಣ ಅವರ ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 8ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ಪ್ರಕಟಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ಶಿಕ್ಷೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು ಅನಿವಾರ್ಯವಾಗಿದೆ.
ಪ್ರಜ್ವಲ್ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.
ಅರ್ಜಿದಾರ ದೇವರಾಜೇಗೌಡ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರು, ಅಸಿಂಧು ಆದೇಶಕ್ಕೆ ತಡೆ ನೀಡಬಾರದು. ತಡೆ ನೀಡಲು ಈ ನ್ಯಾಯಾಲಯಕ್ಕೆ ಅವಕಾಶವಿಲ್ಲ. ಆದೇಶ ಹೊರಡಿಸಿದ ದಿನವೇ ತಡೆಗೆ ಕೋರಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ, ಅರ್ಜಿ ಸಲ್ಲಿಸಲು ವಿಳಂಬ ಮಾಡಲಾಗಿದೆ ಎಂದು ಆಕ್ಷೇಪಿಸಿದ್ದರು.
ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರು ಭಾರತೀಯ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ಸಲ್ಲಿಸಿದ್ದು, ಅಕ್ರಮ ಎಸಗುವ ಮೂಲಕ ಆಯ್ಕೆಯಾಗಿದ್ದಾರೆ ಎಂದು ಪರಾಜಿತ ಅಭ್ಯರ್ಥಿ ಎ ಮಂಜು ಮತ್ತು ವಕೀಲ ದೇವರಾಜೇಗೌಡ ಅವರು ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ಏಕಸದಸ್ಯ ಪೀಠವು ಪುರಸ್ಕರಿಸಿತ್ತು.