
ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿರುವ ಐಪಿಎಸ್ ಅಧಿಕಾರಿ ಶ್ರೀನಾಥ್ ಎಂ. ಜೋಶಿ ಅವರ ನಿರೀಕ್ಷಣಾ ಜಾಮೀನು ಆದೇಶವನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜುಲೈ 18ಕ್ಕೆ ಕಾಯ್ದಿರಿಸಿದೆ.
ಶ್ರೀನಾಥ್ ಜೋಶಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ವಾದ-ಪ್ರತಿವಾದ ಆಲಿಸಿ ಬುಧವಾರ ಆದೇಶ ಕಾಯ್ದಿರಿಸಿದರು.
ಭ್ರಷ್ಟ ಅಧಿಕಾರಿಗಳ ವಿರುದ್ಧ ನಡೆಸಲಾಗುವ ದಾಳಿಗಳನ್ನು ಹೆಸರಿಸಿ ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಾಗೂ ದಾಳಿಗಳ ಕುರಿತು ಮುಂಚಿತವಾಗಿಯೇ ಮಾಹಿತಿಯನ್ನು ಸೋರಿಕೆ ಮಾಡುವ ಮುಖಾಂತರ ನಿಂಗಪ್ಪ ಅಪರಾಧ ಎಸಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದ್ದು, ಅವರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ಕಾಯಿದೆ–1988ರ ಸೆಕ್ಷನ್ 7a ಮತ್ತು 7A ಅಡಿ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಶ್ರೀನಾಥ್ ಜೋಶಿ ಪ್ರಶ್ನಿಸಿದ್ದರು. ಹೊಸದಾಗಿ ಶ್ರೀನಾಥ್‌ಗೆ ನೋಟಿಸ್ ಜಾರಿ ಮಾಡಲು ಹಾಗೂ ನಿರೀಕ್ಷಣಾ ಜಾಮೀನು ಸೇರಿದಂತೆ ಕಾನೂನಿನಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸುವಂತೆ ಜೋಶಿಗೆ ಹೈಕೋರ್ಟ್ ನಿರ್ದೇಶಿಸಿ, ಅರ್ಜಿ ಇತ್ಯರ್ಥಪಡಿಸಿತ್ತು.
ಇನ್ನು, ನಿಂಗಪ್ಪ ಸಾವಂತ್ ಅವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದತಿ ಕೋರಿರುವ ಅರ್ಜಿಯ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.