

ಕೇಂದ್ರ ಸರ್ಕಾರದಲ್ಲಿ ಬೃಹತ್ ಕೈಗಾರಿಕ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ, ವಿಶೇಷ ತನಿಖಾ ದಳದ ಮುಖ್ಯಸ್ಥ ಎಂ ಚಂದ್ರಶೇಖರ್ ದಾಖಲಿಸಿರುವ ದೂರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ಸಂಧಾನ ವಿಫಲವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಮಾಹಿತಿ ನೀಡಲಾಗಿದೆ.
ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಅರ್ ರದ್ದುಪಡಿಸಬೇಕು ಎಂದು ಕೋರಿ ಎಚ್ ಡಿ ಕುಮಾರ ಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಕುಮಾರಸ್ವಾಮಿ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು “ಚಂದ್ರಶೇಖರ್ ನೀಡಿರುವ ದೂರು ಸಂಜ್ಞೇರಹಿತವಾಗಿದೆ. ಎಲ್ಲಾ ಷರತ್ತುಗಳಿಗೆ ನಾವು ಒಪ್ಪಿಕೊಂಡಿದ್ದರೂ ಸಂಧಾನ ಪ್ರಯತ್ನ ವಿಫಲವಾಗಿದೆ” ಎಂದು ಪೀಠಕ್ಕೆ ತಿಳಿಸಿದರು.
ಸರ್ಕಾರದ ಪರ ರಾಜ್ಯ ಸರ್ಕಾರಿ ಅಭಿಯೋಜಕರಾದ ಬಿ ಎನ್ ಜಗದೀಶ್ ಅವರು “ಪ್ರತಿವಾದಿಯ ಒಂದು ಷರತ್ತಿಗೆ ಅರ್ಜಿದಾರ ಕುಮಾರಸ್ವಾಮಿ ಒಪ್ಪಲಿಲ್ಲ” ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ಮಧ್ಯಸ್ಥಿಕೆ ಆಗುವುದಿಲ್ಲವೇ? ಮೆರಿಟ್ ಆಧಾರದಲ್ಲಿ ವಿಚಾರಣೆ ಮುಂದುವರಿಸಲಾಗುವುದು” ಎಂದು ತಿಳಿಸಿ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿತು.
ಈ ಮೊದಲು ಪ್ರಕರಣದ ಸಂಧಾನಕ್ಕಾಗಿ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿತ್ತು.
ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ತನ್ನ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚಂದ್ರಶೇಖರ್, ಸಂಜಯನಗರ ಪೊಲೀಸ್ ಠಾಣೆಯಲ್ಲಿ 2024ರಲ್ಲಿ ದೂರು ದಾಖಲಿಸಿದ್ದರು. ಇದನ್ನು ಆಧರಿಸಿ ಬಿಎನ್‌ಎಸ್ ಸೆಕ್ಷನ್ 224 (ಸರ್ಕಾರಿ ನೌಕರರಿಗೆ ಅವರ ಅಧಿಕೃತ ಕರ್ತವ್ಯಗಳ ಮೇಲೆ ಪ್ರಭಾವ ಬೀರಲು ಬೆದರಿಕೆ ಹಾಕಿದ) ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ.