ಮೇಕೆದಾಟು ಪಾದಯಾತ್ರೆ: ಡಿಸಿಎಂ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣ ವಜಾಗೊಳಿಸಿದ ಹೈಕೋರ್ಟ್‌

ಇದಲ್ಲದೆ, ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಮಂಡ್ಯದಲ್ಲಿ 500 ರೂಪಾಯಿ ನೋಟುಗಳನ್ನು ಕಾರ್ಯಕರ್ತರತ್ತ ಎಸೆದಿದ್ದ ಪ್ರಕರಣ ಸಂಬಂಧ ಮಂಡ್ಯ ಪೊಲೀಸರು ʼಬಿʼ ವರದಿ ಸಲ್ಲಿಸಿರುವುದರಿಂದ ಪ್ರಕರಣ ಹಿಂಪಡೆಯಲಾಗಿದೆ.
D K Shivakumar and Karnataka HC
D K Shivakumar and Karnataka HC

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ನಡೆಸಿದ ಪಾದಯಾತ್ರೆ ವೇಳೆ ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಶುಕ್ರವಾರ ವಜಾ ಮಾಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ರದ್ದುಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ.

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯಿದೆ ಸೆಕ್ಷನ್‌ 51(ಬಿ) ಮತ್ತು ಐಪಿಸಿ ಸೆಕ್ಷನ್‌ 269 ಅಡಿಯಲ್ಲಿ ಕನಕಪುರ ಟೌನ್ ಠಾಣಾ ಪೊಲೀಸರು ಮತ್ತು ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ದಾಖಲಿಸಿದ್ದ ಪ್ರತ್ಯೇಕ ಎರಡು ಪ್ರಕರಣಗಳ ಮುಂದಿನ ಕಾನೂನು ಪ್ರಕ್ರಿಯೆಗೆ ತಡೆಯಾಜ್ಞೆ ವಿಧಿಸಿ ನ್ಯಾಯಾಲಯವು ವಿಚಾರಣೆ ಮುಂದೂಡಿದೆ.

ಇನ್ನೊಂದೆಡೆ ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ಮಂಡ್ಯದಲ್ಲಿ 500 ರೂಪಾಯಿ ನೋಟುಗಳನ್ನು ಕಾರ್ಯಕರ್ತರತ್ತ ಬಿಸಾಡಿದ ಪ್ರಕರಣ ಸಂಬಂಧ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಡಿ ಕೆ ಶಿವಕುಮಾರ್‌ ಪರ ವಕೀಲರು ಹಿಂಪಡೆದಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ಹಿಂಪಡೆಯಲಾಗಿದೆ.

Also Read
ಮೇಕೆದಾಟು ಪಾದಯಾತ್ರೆ: ಎಂಟೂ ಪ್ರಕರಣ ರದ್ದತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಡಿಸಿಎಂ ಶಿವಕುಮಾರ್‌

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು 2022ರ ಜನವರಿ 9ರಿಂದ 10 ದಿನ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿದ್ದಲ್ಲದೆ, ಸಾಂಕ್ರಾಮಿಕ ರೋಗ ಹರಡಲು ಕಾರಣವಾದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣೆ ಕಾಯಿದೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯಿದೆ ಅಡಿ ಡಿ ಕೆ ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್‌ ಮುಖಂಡರ ವಿರುದ್ಧ ಉಪ್ಪಾರಪೇಟೆ, ಹಲಸೂರು ಗೇಟ್ ಮತ್ತು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಈ ಎಲ್ಲಾ ದೂರುಗಳನ್ನು ವಜಾ ಮಾಡುವಂತೆ ಕೋರಿ ಡಿ ಕೆ ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಇದರಲ್ಲಿ ಸಾತನೂರು ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರಕರಣ, ಕನಕಪುರ ಠಾಣೆ ಮತ್ತು ಶಿವಾಜಿನಗರ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿರುವ ಪ್ರಕರಣಗಳ ವಿಚಾರಣೆಯನ್ನು ಜೂನ್‌ 16ಕ್ಕೆ ನ್ಯಾಯಾಲಯ ಮುಂದೂಡಿದೆ. ಶಿವಕುಮಾರ್ ಅವರನ್ನು ವಕೀಲ ಅರ್ನವ್ ಬಾಗಲವಾಡಿ ಪ್ರತಿನಿಧಿಸಿದ್ದರು.

Related Stories

No stories found.
Kannada Bar & Bench
kannada.barandbench.com