ಸಚಿವ ಜಮೀರ್‌ ಅಹ್ಮದ್‌ ಖಾನ್‌ ಆಯ್ಕೆ ಪ್ರಶ್ನಿಸಿ ಅರ್ಜಿ: ಲಿಖಿತ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ಆದೇಶ

ಚುನಾವಣಾ ಅರ್ಜಿಯ ದಾಖಲೆಗಳನ್ನು ಅವುಗಳ ಅಡಕಗಳೊಂದಿಗೆ ಪ್ರತಿವಾದಿಗಳ ಪರ ವಕೀಲರಿಗೆ ನೀಡಲು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ ಹೈಕೋರ್ಟ್‌.
MLA B Z Zameer Ahmed Khan and Karnataka HC
MLA B Z Zameer Ahmed Khan and Karnataka HC
Published on

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಆ ಮೂಲಕ ಚುನಾವಣಾ ಅಕ್ರಮ ಎಸಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ.

ಜಮೀರ್ ಅಹ್ಮದ್ ಆಯ್ಕೆಯನ್ನು ಆಕ್ಷೇಪಿಸಿ ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ. ಶ್ರೀಧರ್ ಎಂಬುವರು ಸಲ್ಲಿಸಿರುವ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠವು ಚುನಾವಣಾ ತಕರಾರು ಅರ್ಜಿಯ ಸಂಪೂರ್ಣ ಕಾಗದಗಳನ್ನು ಅವುಗಳ ಅಡಕಗಳೊಂದಿಗೆ ಪ್ರತಿವಾದಿಗಳ ಪರ ವಕೀಲರಿಗೆ ನೀಡಲು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು. ಇದೇ ವೇಳೆ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಬೇಕಾಗಿದ್ದು, ಅದಕ್ಕೆ ಸಮಯ ಬೇಕು ಎಂದು ಶಾಸಕ ಜಮೀರ್ ಅಹ್ಮದ್ ಪರ ವಕೀಲರು ಕೋರಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿದ ಪೀಠವು ಮುಂದಿನ ವಿಚಾರಣಾ ದಿನಾಂಕದೊಳಗೆ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳ ಪರ ವಕೀಲರಿಗೆ ಸೂಚಿಸಿತು.

ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಅದೇ ರೀತಿ ಜಮೀರ್ ಅಹ್ಮದ್ ಸಹ ಚಾಮರಾಜಪೇಟೆ ಕ್ಷೇತ್ರದಿಂದ ಆಯ್ಕೆಯಾಗಿದ್ದಾಾರೆ. ಇದು ಚುನಾವಣಾ ಅಕ್ರಮಕ್ಕೆ ಸಮನಾಗಿದೆ. ಆದ್ದರಿಂದ, ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂಬುದು ಅರ್ಜಿದಾರರ ವಾದವಾಗಿದೆ. ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದಿಸಿದರು.

Also Read
ಗ್ಯಾರಂಟಿ ಯೋಜನೆಗಳು ಆಮಿಷಕ್ಕೆ ಸಮ, ಚುನಾವಣಾ ಅಕ್ರಮ: ಸಿದ್ದರಾಮಯ್ಯ ಅನರ್ಹತೆ ಕೋರಿ ಹೈಕೋರ್ಟ್‌ನಲ್ಲಿ ಪ್ರಕರಣ

ಕಾಂಗ್ರೆಸ್‌ನಿಂದ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮವಾಗಿದೆ. ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಈ ಯೋಜನೆಗಳು ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿವೆ. ಮತದಾರರಿಗೆ ಆಮಿಷವೊಡ್ಡುವುದು ಪ್ರಜಾಪ್ರತಿನಿಧಿ ಕಾಯಿದೆಯ ಅನ್ವಯ ಅಪರಾಧವಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಕಾಂಗ್ರೆಸ್ ಶಾಸಕರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com