ಸಂವಿಧಾನದ ನಿಗದಿತ ನಮೂನೆಯಲ್ಲಿ ಪ್ರಮಾಣ ವಚನ ಸ್ವೀಕರಿಸದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಬಿ ಝಡ್ ಜಮೀರ್ ಅಹ್ಮದ್ ಖಾನ್ ಮತ್ತು ಕೆ ಎನ್ ರಾಜಣ್ಣ ಸೇರಿದಂತೆ 9 ಸಚಿವರು ಹಾಗೂ 37 ಶಾಸಕರ ಪ್ರಮಾಣ ವಚನ ಸ್ವೀಕಾರವನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ನಿವಾಸಿ ಭೀಮಪ್ಪ ಗುಂಡಪ್ಪ ಗದಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಸಂವಿಧಾನದ ಪ್ರಕಾರ ಕೇವಲ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಬೇಕಿದೆ. ಆದರೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ 9 ಸಚಿವರು ಮತ್ತು 37 ಶಾಸಕರು ಮತದಾರರು ಅಥವಾ ಇತರೆ ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಿಂದ ಅವರ ಪ್ರಮಾಣ ವಚನ ಸ್ವೀಕಾರವನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಮನವಿಯಲ್ಲಿ ಕೋರಲಾಗಿತ್ತು.
ಈ ಮನವಿ ಪುರಸ್ಕರಿಸಲು ನಿರಾಕರಿಸಿದ ಪೀಠವು ಇದು ಪ್ರಜಾಸತ್ತಾತ್ಮಕ ವ್ಯವಸ್ಥೆ. ಸಚಿವರು ಹಾಗೂ ಶಾಸಕರು ಮತದಾರರಿಂದ ಚುನಾಯಿತರಾಗಿದ್ದಾರೆ. ನಿಗದಿತ ನಮೂನೆ ಹೊರತಾಗಿ ಇತರೆ ಮಾದರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ತಾಂತ್ರಿಕ ಅಂಶವಷ್ಟೇ. ಕೆಲವೊಮ್ಮೆ ಉತ್ಸಾಹದಲ್ಲಿ ಯಾರನ್ನಾದರೂ ಹೆಸರಿಸಬಹುದು. ಅವರು ತಮ್ಮ ಕೆಲಸ ಕಾರ್ಯಗಳನ್ನು ಮಾಡಲಿ. ನಿಮಗೆ ಅಷ್ಟೊಂದು ಅತೃಪ್ತಿಯಿದ್ದರೆ ಮುಂಬರುವ ಚುನಾವಣೆಯಲ್ಲಿ ಅವರು ನಿಮ್ಮ ಪ್ರತಿನಿಧಿಗಳಲ್ಲ ಎಂಬುದನ್ನು ತೋರಿಸಿ ಎಂದು ಸಲಹೆ ನೀಡಿತು.
ಅಲ್ಲದೆ, ಚುನಾಯಿತ ಪ್ರತಿನಿಧಿಗಳಾಗಿ ಮತದಾರರರ ನಿರೀಕ್ಷೆಯಂತೆ ಕೆಲಸ ಮಾಡದೆ ಹೋದರೆ ಆಗ ಅವರು ಆಯ್ಕೆಯಾಗದಂತೆ ನೀವು ನೋಡಿಕೊಳ್ಳಿ. ಮತಚಲಾಯಿಸುವಾಗ ನಿಮ್ಮ ಪ್ರಕಾರ ಯೋಗ್ಯವಾದ ಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕು ನಿಮಗಿದೆ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು.