ಮುಡಾ ಬದಲಿ ನಿವೇಶನ ಪಡೆದಿರುವುದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಸೇರಿ ಹಲವರ ವಿರುದ್ಧ ಸಲ್ಲಿಕೆಯಾಗಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ.
ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಯು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ಮುಂದೆ ವಿಚಾರಣೆಗೆ ಬಂದಿತ್ತು.
ಅರ್ಜಿದಾರ ಟಿ ಜೆ ಅಬ್ರಹಾಂ ಅವರು ಆಗಸ್ಟ್ 19ರಂದು ಹೈಕೋರ್ಟ್ ಮಾಡಿರುವ ಮಧ್ಯಂತರ ಆದೇಶ ಉಲ್ಲೇಖಿಸಿ ಮೆಮೊ ಸಲ್ಲಿಸುವ ಮೂಲಕ ವಿಚಾರಣೆ ಮುಂದೂಡಿಕೆ ಕೋರಿದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.
ಇನ್ನು, ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಸ್ವೀಕಾರಾರ್ಹತೆ ಪರಿಗಣಿಸುವುದಕ್ಕೆ ಸಂಬಂಧಿಸಿದ ಆದೇಶವನ್ನು ಆಗಸ್ಟ್ 20ರಂದು ಪ್ರಕಟಿಸುವುದಾಗಿ ಬೆಂಗಳೂರಿನ ಜನಪ್ರತಿನಿಧಿಗಳ ಸತ್ರ ನ್ಯಾಯಾಲಯವು ಈ ಹಿಂದೆ ಹೇಳಿತ್ತು. ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಇದರ ವಿಚಾರಣೆಯನ್ನು ಮಂಗಳವಾರ ನಡೆಸಿದ್ದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ನಿಗದಿಪಡಿಸಿದೆ.
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿ ವಜಾ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 19ರಂದು ನಡೆಸಿತ್ತು. ಈ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ವಾದ ಇನ್ನಷ್ಟೇ ಪೂರ್ಣಗೊಳ್ಳಬೇಕಿದೆ. ಮುಂದಿನ ವಿಚಾರಣೆವರೆಗೆ ಸಂಬಂಧಿತ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ತನ್ನ ಪ್ರಕ್ರಿಯೆಯನ್ನು ಮುಂದೂಡಬೇಕು. ಅಲ್ಲಿಯವರೆಗೆ ಯಾವುದೇ ಆತುರದ ನಿರ್ಧಾರ ಕೈಗೊಳ್ಳಬಾರದು ಎಂದು ಆದೇಶಿಸಿತ್ತು.