
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ ಎಂ ಪಾರ್ವತಿಯವರು ಅಕ್ರಮವಾಗಿ ಬದಲಿ ನಿವೇಶಗಳನ್ನು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣವನ್ನು ಸಿಬಿಐ ಇಲ್ಲವೇ ಇತರೆ ಸ್ವತಂತ್ರ ಸಂಸ್ಥೆಯಿಂದ ತನಿಖೆ ಮಾಡಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ ಎಂ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ, ಆಕ್ಷೇಪಾರ್ಹವಾದ ಜಮೀನಿನ ಮಾಲೀಕ ದೇವರಾಜುಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿದೆ.
ಸ್ನೇಹಮಯಿ ಕೃಷ್ಣರ ಪರವಾಗಿ ಹಿರಿಯ ವಕೀಲರಾದ ಕೆ ಜಿ ರಾಘವನ್ ವಾದಿಸಿದರು. ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್, ಕೇಂದ್ರ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ್ ಕಾಮತ್ ಹಾಜರಿದ್ದರು.
ಇನ್ನು, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ತನಿಖೆಗೆ ಅನುಮತಿಸಿರುವುದನ್ನು ಪ್ರಶ್ನಿಸಿರುವ ಮೇಲ್ಮನವಿ ಮತ್ತು ದೇವರಾಜು ಅವರು ತಮ್ಮ ವಿರುದ್ಧ ಕ್ರಿಮಿನಲ್ ತನಿಖೆಗೆ ಅನುಮತಿಸಿರುವುದಕ್ಕೆ ಆಕ್ಷೇಪಿಸಿರುವ ಎರಡು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆಯನ್ನೂ ಹೈಕೋರ್ಟ್ ಏಪ್ರಿಲ್ 28ಕ್ಕೆ ನಡೆಸಲಿದೆ.
ಪ್ರಕರಣದ ಹಿನ್ನೆಲೆ: ಸಿಎಂ ಪತ್ನಿ ಪಾರ್ವತಿ ಅವರಿಗೆ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3.16 ಎಕರೆ ಜಮೀನಿನ ಬದಲಿಗೆ ಸುಮಾರು ರೂ. 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಈ ಸಂಬಂಧ ತನಿಖೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿದಂತೆ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆಗೆ ಅನುಮತಿ ನೀಡಿ ರಾಜ್ಯಪಾಲರು ಆಗಸ್ಟ್ 17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19ರಂದು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ಸೆಪ್ಟೆಂಬರ್ 24ರಂದು ಹೈಕೋರ್ಟ್ ಆದೇಶಿಸಿತ್ತು.
ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಎಫ್ಐಆರ್ ದಾಖಲಾದ ದಿನವೇ ಅಂದರೆ ಸೆಪ್ಟೆಂಬರ್ 27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.