ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸಬೇಕಾದ ಅಗತ್ಯವನ್ನು ಪರಿಶೀಲಿಸಲು ಮುಂದಾಗಿದ್ದ ತ್ರಿಪುರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ ಬಿ ಪರ್ದಿವಾಲಾ ಅವರಿದ್ದ ರಜಾಕಾಲೀನ ಪೀಠ, ಕಳೆದ ವಾರ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಿತು.
ಅಂಬಾನಿ ಕುಟುಂಬಕ್ಕೆ ಬೆದರಿಕೆ ಗ್ರಹಿಕೆ ಕುರಿತು ಗೃಹ ಸಚಿವಾಲಯದ ಮೂಲ ದಾಖಲೆಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಿದ್ದ ಹೈಕೋರ್ಟ್, ಪ್ರಕರಣವನ್ನು ಮತ್ತೆ ಮುಂದೂಡುವುದಿಲ್ಲ ಎಂದಿತ್ತು.
ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿತ್ತು. ಅಂಬಾನಿ ಕುಟುಂಬಕ್ಕೆ ಎದುರಾಗಿರುವ ಬೆದರಿಕೆಯ ಕುರಿತಾದ ಇತ್ತೀಚಿನ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಆದರೆ, ಇದಕ್ಕೆ ನಿರಾಕರಿಸಿದ್ದ ಕೇಂದ್ರವು ಈ ವಿಷಯ ಇದಾಗಲೇ ಬಾಂಬೆ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಿದೆ ಎಂದಿತ್ತು. ಆದರೆ, ಮುಂದಿನ ವಿಚಾರಣೆ ವೇಳೆ ವರದಿಯನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಇಂದ್ರಜಿತ್ ಮಹಾಂತಿ ಮತ್ತು ನ್ಯಾ. ಎಸ್ ಜಿ ಚಟ್ಟೋಪಾಧ್ಯಾಯ ಅವರಿದ್ದ ಪೀಠ ನಿರ್ದೇಶಿಸಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರಕರಣದಲ್ಲಿ ಅರ್ಹತೆ ಇಲ್ಲದ ಮತ್ತು ಕೇವಲ ಮಧ್ಯಸ್ಥ ವ್ಯಕ್ತಿಯೊಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಇದನ್ನು ತಿರಸ್ಕರಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.