ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ನೇಮಕ ಎತ್ತಿ ಹಿಡಿದ ಹೈಕೋರ್ಟ್‌

ನ್ಯಾಯಮೂರ್ತಿ ಎನ್‌ ಎಸ್‌ ಸಂಜಯಗೌಡ ಅವರಿದ್ದ ಏಕಸದಸ್ಯ ಪೀಠವು ನೇಮಕಾತಿ ರದ್ದುಗೊಳಿಸಿ 2023ರ ಸೆಪ್ಟೆಂಬರ್ 12ರಂದು ಆದೇಶಿಸಿತ್ತು.
University of Mysore
University of Mysore
Published on

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್‌ ಕೆ ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ರದ್ದುಪಡಿಸಿದೆ. ಇದರಿಂದಾಗಿ ಲೋಕನಾಥ್ ಕುಲಪತಿಯಾಗಿ ಮುಂದುವರಿಯಲಿದ್ದಾರೆ.

ಏಕಸದಸ್ಯ ಪೀಠದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಪ್ರೊ. ಎನ್‌ ಕೆ ಲೋಕನಾಥ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಪುರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ: ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಕ ಮಾಡಿ 2023ರ ಮಾರ್ಚ್ 23ರಂದು ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಮತ್ತು ಡಾ. ಜಿ ವೆಂಕಟೇಶ್‌ ಕುಮಾರ್‌ ಹೈಕೋರ್ಟ್‌ನಲ್ಲಿ ಪ್ರತ್ಯೇಕ ಅರ್ಜಿ ದಾಖಲಿಸಿದ್ದರು. ಕುಲ‍‍ಪತಿ ನೇಮಕಾತಿ ಪ್ರಕ್ರಿಯೆಯಲ್ಲಿ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯಿದೆ–2000 ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳನ್ನು ಅನುಸರಿಸಿಲ್ಲ ಎಂದು ಆಕ್ಷೇಪಿಸಿದ್ದರು.

Also Read
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್‌ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎನ್‌ ಎಸ್‌ ಸಂಜಯಗೌಡ ಅವರಿದ್ದ ಏಕಸದಸ್ಯ ಪೀಠವು ನೇಮಕಾತಿ ರದ್ದುಗೊಳಿಸಿ 2023ರ ಸೆಪ್ಟೆಂಬರ್ 12ರಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಲೋಕನಾಥ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೊದಲು ಈ ಮೇಲ್ಮನವಿ ವಿಚಾರಣೆ ನಡೆಸಿದ್ದ ಈ ಹಿಂದಿನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ (ಈಗ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ) ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು.

Kannada Bar & Bench
kannada.barandbench.com