ಮುಂದಿನ ತಿಂಗಳು ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಬೆಂಗಳೂರು ನಗರ ಪ್ರಧಾನ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ ಮುರಳೀಧರ ಪೈ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಸಿವಿಲ್ ನ್ಯಾಯಾಲಯದ ಆವರಣಲ್ಲಿ ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಯಸುವವರು ಸಂಬಂಧ ಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಅದಾಲತ್‌ನಲ್ಲಿ ಉಭಯ ಪಕ್ಷಗಾರರಿಗೆ ರಾಜೀ ಮಾಡಿಕೊಳ್ಳುವುದಕ್ಕೆ ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಉಭಯ ಪಕ್ಷಕಾರರಿಗೆ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಇಬ್ಬರ ನಡುವಿನ ಬಾಂಧವ್ಯ ಉಳಿದು ವಿವಾದ ತೀರ್ಮಾನವಾಗಲಿದೆ. ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣ ಮರು ಪಾವತಿ ಮಾಡಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದಾಗಿದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ಸಂಧಾನದ ಮೂಲಕ ಬಹೆಗರಿಸಿಕೊಳ್ಳಲು ಅವಕಾಶವಿದೆ ಎಂದರು.
ಶೇ.50 ರಿಯಾಯಿತಿ ಸೆ.9ಕ್ಕೆ ಅಂತ್ಯ: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಬಾಕಿ ಇರುವ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ದರದಲ್ಲಿ ಶುಲ್ಕ ಪಾವತಿ ಮಾಡುವುದಕ್ಕೆ ನೀಡಿದ್ದ ಅವಕಾಶ ಸೆಪ್ಟೆಂಬರ್ 9ಕ್ಕೆ ಅಂತ್ಯಗೊಳ್ಳಲಿದೆ. ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಧ್ಯಕ್ಷರ ಸೂಚನೆ ಮೇರೆಗೆ ರಿಯಾಯಿತಿ ಶುಲ್ಕ ಪಾವತಿಗೆ ಸರ್ಕಾರ ಆದೇಶ ನೀಡಿತ್ತು. ಈ ಆದೇಶವನ್ನು ಈಗಾಗಲೇ ಎರಡು ಬಾರಿ ವಿಸ್ತರಣೆ ಮಾಡಲಾಗಿದೆ. ಆದ್ದರಿಂದ, ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡದ ಮೊತ್ತ ಬಾಕಿ ಉಳಿಸಿಕೊಡಿರುವವರು ತಕ್ಷಣ ಪಾವತಿ ಮಾಡಬಹುದಾಗಿದೆ ಎಂದು ತಿಳಿಸಿದರು.