ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಮಾಧ್ಯಮವಾದ ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ ಏಳು ದಿನಗಳ ಪೊಲೀಸ್ ವಶಕ್ಕೆ ಒಪ್ಪಿಸಿತು.
ಚೀನಾ ಪರ ಪ್ರಚಾರಕ್ಕಾಗಿ ನ್ಯೂಸ್ ಕ್ಲಿಕ್ ಹಣ ಪಡೆಯುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಈ ಇಬ್ಬರನ್ನು ನಿನ್ನೆ (ಮಂಗಳವಾರ) ಬಂಧಿಸಲಾಗಿತ್ತು.
ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ಪತ್ರಕರ್ತರು ಹಾಗೂ ಸಿಬ್ಬಂದಿಯ ನಿವಾಸಗಳ ಮೇಲೆ ದೆಹಲಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ ನಂತರ ಪುರ್ಕಾಯಸ್ಥ ಮತ್ತು ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು.
ಚೀನಾ ಸರ್ಕಾರ ನಡೆಸುವ ಮಾಧ್ಯಮ ಸಂಸ್ಥೆಗಳ ಜೊತೆ ಗುರುತಿಸಿಕೊಂಡಿರುವ ಅಮೆರಿಕದ ಉದ್ಯಮಿ ನೆವಿಲ್ಲೆ ರಾಯ್ ಸಿಂಘಮ್ ಅವರು ನ್ಯೂಸ್ ಕ್ಲಿಕ್ ಜಾಲತಾಣ ವೇದಿಕೆಗೆ ಹಣ ಹೂಡುತ್ತಿದ್ದಾರೆ ಎಂದು ಕಳೆದ ಆಗಸ್ಟ್‌ನಲ್ಲಿ ನ್ಯೂಯಾರ್ಕ್ ಟೈಮ್ಸ್ ತನಿಖಾ ವರದಿ ಪ್ರಕಟಿಸಿತ್ತು.