ಲೋಕಾಯುಕ್ತ ವಿಶೇಷ ಪೊಲೀಸ್ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್ ಸಂಬಂಧ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಮತ್ತು ಜೆಡಿಎಸ್ ಶಾಸಕ ಸುರೇಶ್ ಬಾಬು ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಅಲ್ಲದೇ, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದಶಕದ ಹಿಂದೆ ಕುಮಾರಸ್ವಾಮಿ ಅವರಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ರದ್ದತಿಯ ವಿಚಾರದಲ್ಲೂ ಹಸ್ತಕ್ಷೇಪ ಮಾಡಬಾರದು ಎಂದೂ ನ್ಯಾಯಾಲಯ ಆದೇಶಿಸಿದೆ.
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಮತ್ತು ಸುರೇಶ್ ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.
“ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ದಾಖಲಾಗಿರುವ ಆಕ್ಷೇಪಾರ್ಹ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಅಲ್ಲದೇ, ಆಕ್ಷೇಪಾರ್ಹವಾದ ಪ್ರಕರಣ ಆಧರಿಸಿ ಕುಮಾರಸ್ವಾಮಿ ಅವರಿಗೆ ದಶಕದ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಕೆ ಮಾಡಲಾಗದು ಮತ್ತು ಮಾಡಬಾರದು. ಈಗಾಗಲೇ ನಿರೀಕ್ಷಣಾ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಕೆ ಮಾಡಿದ್ದರೆ, ಅದರ ಸಂಬಂಧ ಯಾವುದೇ ಕ್ರಮಕೈಗೊಳ್ಳದಂತೆ ಲೋಕಾಯುಕ್ತ ಎಸ್‌ಐಟಿಯನ್ನು ನಿರ್ಬಂಧಿಸಲಾಗಿದೆ" ಎಂದು ಹೈಕೋರ್ಟ್ ಆದೇಶಿಸಿತು.
ಮುಂದುವರೆದು, ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರವು ಬಲವಂತದ ಕ್ರಮಕೈಗೊಂಡರೆ ಅರ್ಜಿದಾರರು ನ್ಯಾಯಾಲಯದ ಮುಂದೆ ಬರುವ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್, ಚಂದ್ರಶೇಖರ್ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಲಾಗಿದೆ. ಅರ್ಜಿ ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಲಾಗಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಹಷ್ಮತ್ ಪಾಷಾ ಅವರು “ಸಂಜ್ಞೇರಹಿತ ಅಪರಾಧವನ್ನು ಎಫ್‌ಐಆರ್ ಮಾಡಲು ಮ್ಯಾಜಿಸ್ಟ್ರೇಟ್ ಅನುಮತಿಸಿದ್ದಾರೆ. ಈಗ ಅದು ಸಂಜ್ಞೇ ಅಪರಾಧವಾಗುತ್ತದೆ. ಇದರ ಆಧಾರದಲ್ಲಿ ಅರ್ಜಿದಾರರಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ತನಿಖಾಧಿಕಾರಿ ಶೋಧ ಮತ್ತು ಜಪ್ತಿ ಮಾಡಲು ಅಧಿಕಾರ ದೊರೆಯುತ್ತದೆ. ಈ ಕಾರಣಕ್ಕಾಗಿ ಎಫ್‌ಐಆರ್‌ಗೆ ತಡೆ ನೀಡಬೇಕು" ಎಂದು ಕೋರಿದರು.
ಅಲ್ಲದೆ, ನವೆಂಬರ್ 11ರಂದು ಚಂದ್ರಶೇಖರ್ ಅವರು ಸಂಜಯ್ ನಗರ ಠಾಣೆಗೆ ದೂರು ಸಲ್ಲಿಕೆ ಮಾಡಿದ್ದಾರೆ. ನವೆಂಬರ್ 21ರಂದು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ದಶಕದ ಹಿಂದೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ರದ್ದತಿಗೆ ಲೋಕಾಯುಕ್ತ ಎಸ್‌ಐಟಿ ಕಡೆಯಿಂದ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಇಂದು ಅದರ ಅರ್ಜಿ ವಿಚಾರಣೆ ವಿಚಾರಣಾಧೀನ ನ್ಯಾಯಾಲಯದಲ್ಲಿ ನಡೆದಿದೆ. ನಿನ್ನೆ ಮ್ಯಾಜಿಸ್ಟ್ರೇಟ್ ಆದೇಶ ಪಡೆದು, ತಕ್ಷಣ ಸಂಜಯ್ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹೀಗಾಗಿ, ಇಂದು ನ್ಯಾಯಾಲಯದ ಮುಂದೆ ಬಂದಿದ್ದೇವೆ ಎಂದು ಘಟನಾವಳಿಗಳನ್ನು ವಿವರಿಸಿದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು “ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಲವಂತ ಕ್ರಮಕೈಗೊಳ್ಳುವುದಿಲ್ಲ. ವಿಶೇಷ ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ರದ್ದತಿ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ” ಎಂದರು.
ಈ ನಡುವೆ, ಹಷ್ಮತ್ ಪಾಷಾ ಅವರು ಪ್ರಕರಣಕ್ಕೆ ತಡೆ ನೀಡಬೇಕು ಎಂದು ಒತ್ತಿ ಹೇಳಿದಾಗ ಪೀಠವು “ಕುಮಾರಸ್ವಾಮಿ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಅವರ ವಿರುದ್ಧದ ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ತಡೆ ನೀಡಲಾಗದು. ರಾಜ್ಯ ಸರ್ಕಾರವು ಯಾವುದೇ ಬಲವಂತದ ಕ್ರಮಕೈಗೊಳ್ಳುವುದಿಲ್ಲ ಎಂದು ಹೇಳಿದೆಯಲ್ಲಾ? ರಾಜ್ಯ ಸರ್ಕಾರವು ಮುಚ್ಚಳಿಕೆಗೆ ವಿರುದ್ಧವಾಗಿ ಬಲವಂತದ ಕ್ರಮಕೈಗೊಂಡರೆ ಅರ್ಜಿದಾರರು ನ್ಯಾಯಾಲಯದ ಮುಂದೆ ಬರಬಹುದು” ಎಂದು ಮೌಖಿಕವಾಗಿ ಹೇಳಿತು.