ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಫಲಕಗಳು ಅಥವಾ ರಾಜಕೀಯ ನಾಯಕರ ಅನಧಿಕೃತ ಜಾಹೀರಾತು/ಹೋರ್ಡಿಂಗ್‌ಗಳನ್ನು ಹಾಕದಂತೆ ಖಾತರಿಪಡಿಸುವಂತೆ ಈಚೆಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಎಚ್ ಎಂ ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
“ಭವಿಷ್ಯದಲ್ಲಿ ಯಾವುದೇ ಪ್ರದರ್ಶನ ಫಲಕಗಳು, ಅನಧಿಕೃತ ಜಾಹೀರಾತುಗಳು, ಸಾರ್ವಜನಿಕ ಸ್ಥಳಗಳಲ್ಲಿ ಹೋರ್ಡಿಂಗ್‌ಗಳು ಮತ್ತು ವಿವಿಧ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರದರ್ಶನ ಮಾಡುವಂತಿಲ್ಲ. ಕಾಮನ್ ಕಾಸ್ ವರ್ಸಸ್ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶ ಮತ್ತು ಸುತ್ತೋಲೆಯನ್ನು ಪರಿಗಣಿಸಿ ಸಮಂಜಸವಾದ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ” ಎಂದು ಪೀಠ ಆದೇಶದಲ್ಲಿ ಹೇಳಿದೆ.
ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಚಿತ್ರಗಳನ್ನು ಪ್ರಕಟಿಸದಂತೆ ಕಾಮನ್ ಕಾಸ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಮೇಲಿನ ನಿರ್ದೇಶನಕ್ಕೆ ಸಂಬಂಧಿಸಿದಂತೆ ಆದೇಶ ಪಾಲಿಸುವ ಸಂಬಂಧ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಪೀಠಕ್ಕೆ ತಿಳಿಸಿದೆ.
ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಎಲ್ಲಾ ಶಾಸನಬದ್ಧ ಸ್ಥಳೀಯ ಸಂಸ್ಥೆಗಳಿಗೆ ಕಾನೂನುಬಾಹಿರವಾಗಿ ಹಾಕಲಾದ ಹೋರ್ಡಿಂಗ್‌ಗಳನ್ನು ತೆರವುಗೊಳಿಸುವಂತೆ ಆದೇಶಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.
ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿರುವ ಜನಪ್ರತಿನಿಧಿಗಳ ಚಿತ್ರಗಳನ್ನು ತೆರೆವುಗೊಳಿಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್‌ನಲ್ಲಿ ಸುತ್ತೋಲೆ ಹೊರಡಿಸಲಾಗಿದೆ ಎಂಬ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತರಲಾಯಿತು. ಸರ್ಕಾರದ ಕ್ರಮಗಳನ್ನು ಪರಿಗಣಿಸಿದ ಪೀಠವು “ಸರ್ಕಾರದ ಅನುಪಾಲನಾ ವರದಿ ಸಲ್ಲಿಸಿದ್ದು, ಈಗಾಗಲೇ ಕ್ರಮ ಜರುಗಿಸಿರುವುದರಿಂದ ಹಾಲಿ ಪಿಐಎಲ್‌ಗೆ ಸಂಬಂಧಿಸಿದಂತೆ ಯಾವುದೇ ಆದೇಶ ಮಾಡುವ ಅಗತ್ಯವಿಲ್ಲ” ಎಂದು ಪೀಠ ಹೇಳಿದೆ.