ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ರಂದು ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ನಿರ್ಧಾರವಾಗಿಲ್ಲ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಈ ಹಿಂದೆ ಬೆಂಗಳೂರಿನಲ್ಲಿ ಕಂಬಳ ಸ್ಪರ್ಧೆ ನಡೆಸಲು ನಿರ್ಧರಿಸಲಾಗಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದ್ದನ್ನು ಇಲ್ಲಿ ನೆನೆಯಬಹುದು.
ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ನಡೆಯಲಿರುವ ಕಂಬಳ ಸ್ಪರ್ಧೆಯನ್ನು ಪ್ರಾಣಿ ಸಂಗ್ರಹಾಲಯದ ಸಮೀಪ ನಡೆಸಲಾಗುತ್ತಿರುವುದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗುತ್ತದೆ. ಇದಕ್ಕೆ ಪರ್ಯಾಯವಾಗಿ ಬೇರೆ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲು ಆಕ್ಷೇಪವಿಲ್ಲ ಎಂದು ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ನಡೆಸಿತು.
ಪೆಟಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು “ದಕ್ಷಿಣ ಕನ್ನಡ ಮತ್ತು ಉಡುಪಿಯ ಯಾವುದೇ ಭಾಗದಲ್ಲಿ ಕಂಬಳ ಸ್ಪರ್ಧೆಗೆ ಆಕ್ಷೇಪವಿಲ್ಲ. ಆದರೆ, ನವೆಂಬರ್ 17ರಂದು ನಡೆಸಲು ಉದ್ದೇಶಿಸಿರುವ ಸ್ಪರ್ಧೆಯು ಪ್ರಾಣಿ ಸಂಗ್ರಹಾಲಯದ ಸಮೀಪ ನಡೆಯುತ್ತಿದೆ. ಇದರಿಂದ ಅಲ್ಲಿರುವ ವನ್ಯಜೀವಿಗಳಿಗೆ ಸಮಸ್ಯೆಯಾಗುತ್ತದೆ. ಈ ಸಂಬಂಧ ಪ್ರಾಣಿ ಸಂಗ್ರಹಾಲಯದ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ” ಎಂದರು.
ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ನವೆಂಬರ್ 17ಕ್ಕೆ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ನಡೆಸುವುದು ಇನ್ನೂ ನಿರ್ಧಾರವಾಗಿಲ್ಲ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸ್ಥಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತದೆ. ಅವರು ವರದಿ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂಬಳ ಸ್ಪರ್ಧೆ ಉಸ್ತುವಾರಿಯಾಗಿರುತ್ತಾರೆ. ಹೀಗಾಗಿ, ಅವರನ್ನು ಅರ್ಜಿದಾರರು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿಸಬೇಕು” ಎಂದರು.
ನವೆಂಬರ್ 5ರಂದು ಬೆಂಗಳೂರು ಮಹಾನಗರದಲ್ಲಿ ಕಂಬಳ ಆಯೋಜಿಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಪೆಟಾ ಕೋರಿತ್ತು. ಆಗ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವ ನಿರ್ಧಾರವಾಗಿಲ್ಲ. ಪಿಲಿಕುಳದಲ್ಲಿ ನವೆಂಬರ್ 17ರಂದು ಸ್ಪರ್ಧೆ ನಡೆಸಲಾಗುವುದು ಎಂದು ತಿಳಿಸಿತ್ತು.
ಆನಂತರ ಪೆಟಾವು ಪಿಲಿಕುಳದಲ್ಲಿ ಪ್ರಾಣಿ ಸಂಗ್ರಹಾಲಯದ ಸಮೀಪ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಇದರಿಂದ ಅಲ್ಲಿನ ಪ್ರಾಣಿಗಳಿಗೆ ಸಮಸ್ಯೆಯಾಗಲಿದೆ. ಸ್ಥಳ ಬದಲಾಯಿಸಬೇಕು ಎಂದು ಕೋರಿದೆ.