ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್ ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿವೆ.
ಈ ವಿಚಾರವಾಗಿ ಬಂಜಾರ, ಭೋವಿ, ಕೊರಮ, ಕೊರಚ ಸಮಾಜ ಕಲ್ಯಾಣ ಸಂಘದ ಶಾಮರಾವ್ ಕೆ. ಪವಾರ್ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಆಯೋಗದ ಅಧ್ಯಕ್ಷರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ನ್ಯಾ. ನಾಗಮೋಹನದಾಸ್ ಆಯೋಗ ಸಲ್ಲಿರುವ ವರದಿಯಲ್ಲಿನ ಜಾತಿವಾರು ವರ್ಗೀಕರಣವನ್ನು ಸ್ವಲ್ಪ ಪರಿಷ್ಕರಿಸಿ 101 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಾಗಿ ಅಂದರೆ ಎಡಗೈ, ಬಲಗೈ ಮತ್ತು ಸ್ಪೃಶ್ಯ ಎಂದು ವರ್ಗೀಕರಿಸಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಪರಿಶಿಷ್ಟ ಜಾತಿಗೆ ಇರುವ ಒಟ್ಟು ಶೇ.17 ಮೀಸಲಾತಿಯಲ್ಲಿ ಎಡಗೈ-ಬಲಗೈ ಸಮುದಾಯಗಳಿಗೆ ತಲಾ ಶೇ.6, ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನೊಳಗೊಂಡ ಸ್ಪೃಶ್ಯ ಗುಂಪುಗಳಿಗೆ ಶೇ.5ರಷ್ಟು ಮೀಸಲಾತಿ ನಿಗದಿಪಡಿಸಲಾಗಿತ್ತು. ಈ ನಿರ್ಣಯವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.