ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಬೆಂಗಳೂರಿನ ರಾಜಾಜಿನಗರ ನಿವಾಸಿ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ರಾಜಶೇಖರ್ ವಾದಿಸಿದರು.
ಗಿರೀಶ್ ಮಟ್ಟಣ್ಣನವರ್ ಹೇಳಿಕೆ ವಿರುದ್ಧ 2025ರ ಆಗಸ್ಟ್ 29ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದ ಕಾವೇರಿ ಕೇದಾರನಾಥ ನೇತೃತ್ವದ ನಿಯೋಗ ಮಟ್ಟಣ್ಣನವರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ದೂರಿನ ಸಂಬಂಧ ಮಹಿಳಾ ಆಯೋಗದಿಂದ ಈವರೆಗೆ ಯಾವುದೇ ಕ್ರಮ ಆಗದ ಕಾರಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಅರ್ಜಿದಾರರು ಸಲ್ಲಿಸಿರುವ ದೂರು ಆಧರಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ದ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ನಿರ್ದೇಶನ ನೀಡಿತು.