ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಅರ್ಜಿದಾರರಿಗೆ ನೀಡಲು ನ್ಯಾಯಾಲಯದ ಅಧಿಕಾರಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.
ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲು ಕಲ್ಪಿಸುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ಡಿ ಜಿ ರಾಘವೇಂದ್ರ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
“ಆಯೋಗವು ಮುಚ್ಚಿದ ಲಕೋಟೆಯಲ್ಲಿ ನೀಡಿರುವ ವರದಿಯನ್ನು ಪರಿಶೀಲಿಸಲಾಗಿದ್ದು, ಅದನ್ನು ಅರ್ಜಿದಾರರ ಪರ ವಕೀಲ ಪ್ರೊ. ರವಿವರ್ಮ ಕುಮಾರ್ ಮತ್ತು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರಿಗೆ ನ್ಯಾಯಾಲಯದ ಅಧಿಕಾರಿ ನೀಡಬೇಕು. ಕನ್ನಡದಲ್ಲಿರುವ ಆಯೋಗದ ವರದಿಯನ್ನು ಇಂಗ್ಲಿಷ್‌ಗೆ ಅನುವಾದಿಸಿ, ನ್ಯಾಯಾಲಯಕ್ಕೆ ಅಡ್ವೊಕೇಟ್ ಜನರಲ್ ಅವರು ಸಲ್ಲಿಸಬೇಕು. ವರದಿ ಆಧರಿಸಿ ಅರ್ಜಿ ತಿದ್ದುಪಡಿ ಮಾಡಲು ಅರ್ಜಿದಾರರಿಗೆ ಅನುಮತಿಸಲಾಗಿದ್ದು, ಆನಂತರ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು” ಎಂದು ನ್ಯಾಯಾಲಯ ಆದೇಶ ಮಾಡಿದೆ.
“ಮುಸ್ಲಿಮ್ ಮೀಸಲಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿದ್ದು, ಅದು ಜುಲೈ 25ಕ್ಕೆ ವಿಚಾರಣೆಗೆ ಬರಲಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿನ ಬೆಳವಣಿಗೆ ಆಧರಿಸಿ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಲು ಕೋರಿಕೆ ಸಲ್ಲಿಸಲು ಉಭಯ ಪಕ್ಷಕಾರರಿಗೆ ಸ್ವಾತಂತ್ರ್ಯ ಕಲ್ಪಿಸಲಾಗಿದೆ” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ 2022ರ ಡಿಸೆಂಬರ್ 27ರಂದು ಮಾಡಿದ್ದ ಮಧ್ಯಂತರ ಆದೇಶವನ್ನು ಮಾರ್ಚ್ 23ರಂದು ಕರ್ನಾಟಕ ಹೈಕೋರ್ಟ್ ಮಾರ್ಪಾಡು ಮಾಡಿತ್ತು. ಈ ಹಿನ್ನೆಲೆಯಲ್ಲಿ ಒಬಿಸಿ ಕೋಟಾದಡಿ ಮುಸ್ಲಿಮ್ ಸಮುದಾಯಕ್ಕೆ ನೀಡಿದ್ದ ಶೇ. 4ರಷ್ಟು ಮೀಸಲಾತಿಯನ್ನು ಹಿಂಪಡೆದು, ತಲಾ ಶೇ. 2ರಷ್ಟು ಮೀಸಲಾತಿಯನ್ನು ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತ ಸಮುದಾಯಕ್ಕೆ ಹಂಚಿಕೆ ಮಾಡಿ 2023ರ ಮಾರ್ಚ್ 27ರಂದು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.
ಈ ಅರ್ಜಿಯ ವಿಚಾರಣೆಯು ಜುಲೈ 25ಕ್ಕೆ ನಿಗದಿಯಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಆಗುವ ಬೆಳವಣಿಗೆಯನ್ನು ಆಧರಿಸಿ, ಹೈಕೋರ್ಟ್‌ನಲ್ಲಿ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಪಕ್ಷಕಾರರು ಕೋರಬಹುದು ಎಂದು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಇದಕ್ಕೂ ಮುನ್ನ, ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು “ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವಂತಿಲ್ಲ ಎಂದು ಈಚೆಗೆ ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿಂದೆ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿರುವ ವರದಿಯನ್ನು ನೀಡಲು ನಿರ್ದೇಶಿಸಬೇಕು” ಎಂದು ಕೋರಿದರು.
ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಲಹೆ-ಸೂಚನೆ ಪಡೆಯಬೇಕಿದ್ದು, ಎರಡು ವಾರಗಳ ಕಾಲ ವಿಚಾರಣೆ ಮುಂದೂಡಬೇಕು” ಎಂದು ಕೋರಿದರು.