ಪಂಚಮಸಾಲಿ ಮೀಸಲಾತಿ: ಆಯೋಗದ ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಫೆ.3ರಂದು ಹೈಕೋರ್ಟ್‌ಗೆ ಸಲ್ಲಿಸಲಿರುವ ಸರ್ಕಾರ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಆದೇಶಿಸಬೇಕು ಎಂಬುದು ಅರ್ಜಿದಾರರ ಕೋರಿಕೆ.
High Court of Karnataka
High Court of Karnataka
Published on

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆಬ್ರವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರವು ಸೋಮವಾರ ತಿಳಿಸಿದೆ.

ಬೆಂಗಳೂರಿನ ಡಿ ಜಿ ರಾಘವೇಂದ್ರ ಅವರು ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಲೋಕ್‌ ಅರಾಧೆ ಮತ್ತು ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆಬ್ರವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಿತು.

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂದು ಆದೇಶಿಸಬೇಕು ಎಂದು ಕೋರಿರುವ ಅರ್ಜಿ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಈಚೆಗೆ ಆದೇಶಿಸಿತ್ತು.

Also Read
ಪಂಚಮಸಾಲಿ ಸಮುದಾಯ ಮೀಸಲಾತಿ ಪ್ರಕರಣ: ಯಥಾಸ್ಥಿತಿ ಕಾಪಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್

ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿ ಒಕ್ಕಲಿಗ ಸಮುದಾಯಕ್ಕೆ ಹೊಸದಾಗಿ ಸೃಷ್ಟಿಸಿರುವ ಪ್ರವರ್ಗ ʼಸಿʼಗೆ ಮತ್ತು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ ʼಡಿʼಗೆ ಸೇರ್ಪಡೆ ಮಾಡಲಾಗಿದೆ ಎಂದು ಇತ್ತೀಚೆಗೆ ಸಚಿವ ಸಂಪುಟ ಸಭೆಯ ಬಳಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿಯವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದನ್ನು ಇಲ್ಲಿ ನೆನೆಯಬಹುದು.

Kannada Bar & Bench
kannada.barandbench.com