ಪಂಚಮಸಾಲಿ ಮೀಸಲಾತಿ: 10 ವರ್ಷಕ್ಕೊಮ್ಮೆ ಒಬಿಸಿ ಮೀಸಲು ಪರಿಷ್ಕರಣೆ ಅಧಿಕಾರ ಸರ್ಕಾರಕ್ಕಿದೆ ಎಂದು ಹೈಕೋರ್ಟ್‌ಗೆ ವಿವರಣೆ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರ ಎಂಬುದಾಗಿ ಘೋಷಿಸಬೇಕು ಎಂದು ಕೋರಿರುವ ಪಿಐಎಲ್‌.
High Court of Karnataka
High Court of Karnataka

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಅಡಿ ಮೀಸಲು ಕಲ್ಪಿಸಲು ಕೋರಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿರುವ ರಾಜ್ಯ ಸರ್ಕಾರ, ಪ್ರತಿ ಹತ್ತು ವರ್ಷಕ್ಕೊಮ್ಮೆ ಹಿಂದುಳಿದ ವರ್ಗಗಳ ಮೀಸಲು ಪಟ್ಟಿಯನ್ನು ಪರಿಷ್ಕರಿಸುವ ಅಧಿಕಾರ ತನಗೆ ಇದೆ ಎಂದು ಪ್ರತಿಪಾದಿಸಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನು ಬಾಹಿರ ಎಂಬುದಾಗಿ ಘೋಷಿಸುವಂತೆ ಕೋರಿ ಬೆಂಗಳೂರಿನ ಡಿ ಜಿ ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಅರ್ಜಿದಾರರ ಪರ ವಕೀಲರು ಸರ್ಕಾರದ ಆಕ್ಷೇಪಣೆಗೆ ಪ್ರತಿಕ್ರಿಯಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿಗೆ ಒಪ್ಪಿದ ಪೀಠವು ಅರ್ಜಿ ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿತು.

ಸರ್ಕಾರದ ಆಕ್ಷೇಪಣೆಯಲ್ಲಿ ಏನಿದೆ?

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ-1995ರ ಸೆಕ್ಷನ್ 9 ಪ್ರಕಾರ ಯಾವುದಾದರೂ ಒಂದು ಸಮುದಾಯವು ತನ್ನನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಮನವಿ ಸಲ್ಲಿಸಿದರೆ, ಅದನ್ನು ಪರಿಶೀಲಿಸುವುದಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಅವಕಾಶವಿದೆ. ನಿಯಮಗಳ ಪ್ರಕಾರ ಆಯೋಗವು ಮನವಿ ಮಾಡಿರುವ ಸಮುದಾಯಗಳು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿವೆಯೇ ಎಂದು ವಿಚಾರಣೆ/ಸಮೀಕ್ಷೆ/ತನಿಖೆ ನಡೆಸಿ ಹಿಂದುಳಿದ ವರ್ಗಗಳ ವರ್ಗೀಕರಣದ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ಆಕ್ಷೇಪಣೆಯಲ್ಲಿ ಸರ್ಕಾರ ತಿಳಿಸಿದೆ.

ಅಲ್ಲದೆ, ಕಾಯಿದೆಯ ಸೆಕ್ಷನ್ 11ರ ಪ್ರಕಾರ ರಾಜ್ಯ ಸರ್ಕಾರವು ಆಯೋಗದೊಂದಿಗೆ ಸಮಾಲೋಚಿಸಿ ಪ್ರತಿ ಹತ್ತು ವರ್ಷಗಳಿಗೊಮ್ಮೆ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಣೆ ಮಾಡಬಹುದಾಗಿದೆ. ಈ ರೀತಿಯಲ್ಲಿ ಒಂದಲ್ಲಾ ಒಂದು ಸಮುದಾಯ ಸಲ್ಲಿಸುವ ಮನವಿಯು ಸದಾ ಆಯೋಗದ ಮಂದೆ ಪರಿಗಣನೆಯಲ್ಲಿರುತ್ತದೆ. ಇದು ಸಹ ನಿರಂತರ ಪ್ರಕ್ರಿಯೆಯಾಗಿದೆ ಎಂದು ಆಕ್ಷೇಪಣೆಯಲ್ಲಿ ಸರ್ಕಾರ ವಿವರಿಸಿದೆ.

Also Read
ಪಂಚಮಸಾಲಿ ಮೀಸಲಾತಿ: ಆಯೋಗದ ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ಸರ್ಕಾರ

ಅಲ್ಲದೆ ಆಯೋಗ ಸಹ ಕಾಲ ಕಾಲಕ್ಕೆ ಸರ್ಕಾರಕ್ಕೆ ಹಲವು ಶಿಫಾರಸ್ಸು ಮಾಡಿದ್ದು, ಅದಕ್ಕೆ ಅನುಗುಣವಾಗಿ ಸರ್ಕಾರವು ಹಲವು ಹಿಂದುಳಿದ ವರ್ಗಗಳನ್ನು ವರ್ಗೀಕರಣ ಮತ್ತು ಮರು ವರ್ಗೀಕರಣ ಮಾಡಿಕೊಂಡು ಬಂದಿದೆ. ಯಾವುದೇ ಹಿಂದುಳಿದ ವರ್ಗದ ವ್ಯಕ್ತಿಯ ಸಾಮಾಜಿಕ ಸ್ಥಿತಿಗತಿ ಒಂದೇ ರೀತಿ ಇರುವುದಿಲ್ಲ. ತೀರಾ ಹಿಂದುಳಿದ ವರ್ಗದ ವ್ಯಕ್ತಿ ಭವಿಷ್ಯದಲ್ಲಿ ಮುಂದುವರಿದ ವರ್ಗಕ್ಕೆ ವರ್ಗಾವಣೆಯಾಗಬಹುದು ಎಂದು ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯವು ತನ್ನನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ಮೀಸಲು ಕಲ್ಪಿಸಲು ಕೋರಿದೆ. ಆ ಬಗ್ಗೆ ಆಯೋಗವು ಪರಿಶೀಲನೆ ನಡೆಸಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ಅದನ್ನು ಸರ್ಕಾರ ಈಗಾಗಲೇ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ. ಈ ಅರ್ಜಿ ಸಲ್ಲಿಸಿರುವ ಅರ್ಜಿದಾರರ ನಡೆಯು ಅಕಾಲಿಕವಾಗಿದೆ. ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಆದ್ದರಿಂದ, ಅರ್ಜಿ ವಿಚಾರಣಾ ಮಾನ್ಯತೆ ಹೊಂದಿಲ್ಲ ಹಾಗೂ ವಜಾಕ್ಕೆ ಅರ್ಹವಾಗಿದೆ ಎಂದು ಆಕ್ಷೇಪಣೆಯಲ್ಲಿ ಸರ್ಕಾರ ವಿವರಿಸಿದೆ.

Related Stories

No stories found.
Kannada Bar & Bench
kannada.barandbench.com