ನ್ಯಾಯಾಲಯದ ಸೀಮಿತ ಕಾರ್ಯ ನಿರ್ವಹಣೆಯಿಂದ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಿಜೆ ರಿತುರಾಜ್‌ ಅವಸ್ಥಿ

ಗಣರಾಜ್ಯೋತ್ಸವದ ಅಂಗವಾಗಿ ಹೈಕೋರ್ಟ್ ಆವರಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮುಖ್ಯ ನ್ಯಾಯಮೂರ್ತಿಯವರು ಮಾತನಾಡಿದರು.
Karnataka High Court and Chief Justice Ritu Raj Awasthi
Karnataka High Court and Chief Justice Ritu Raj Awasthi
Published on

"ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ನ್ಯಾಯಾಲಯಗಳ ಸೀಮಿತ ಕಾರ್ಯ ನಿರ್ವಹಣೆಯಿಂದಾಗಿ ಬಾಕಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಅವುಗಳನ್ನು ಸಮರ್ಥವಾಗಿ ನಿರ್ವಹಿಸುವ ದೊಡ್ಡ ಜವಾಬ್ದಾರಿ ನ್ಯಾಯಾಂಗ ವ್ಯವಸ್ಥೆಯ ಮೇಲಿದೆ" ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದರು.

ಗಣರಾಜ್ಯೋತ್ಸವದ ಅಂಗವಾಗಿ ಹೈಕೋರ್ಟ್ ಆವರಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

"ಕೋವಿಡ್ ಸಾಂಕ್ರಾಮಿಕವು ನಮ್ಮ ಜೀವನ ಹಾಗೂ ಜೀವನಶೈಲಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ನ್ಯಾಯಾಂಗವೂ ಈ ಬದಲಾವಣೆಗಳಿಗೆ ಹೊರತಾಗಿಲ್ಲ. ಇಂಥ ಕಠಿಣ ಪರಿಸ್ಥಿತಿಯಲ್ಲೂ ನ್ಯಾಯಾಂಗ ಸಿಬ್ಬಂದಿ, ಸದಸ್ಯರು, ವಕೀಲರು ಎಲ್ಲರ ಸಹಕಾರದಿಂದ ನ್ಯಾಯಾಲಯಗಳು ಸೀಮಿತ ಅವಕಾಶಗಳ ನಡುವೆಯೇ ಸಮರ್ಥವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ. ಆದರೆ, ನ್ಯಾಯಾಲಯಗಳ ಸೀಮಿತ ಕಾರ್ಯಾಚರಣೆಯ ಪರಿಣಾಮದಿಂದ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಇದು ನ್ಯಾಯಾಂಗ ವ್ಯವಸ್ಥೆಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ" ಎಂದರು.

Also Read
ಪ್ರೇಮ್‌ಜಿ, ಪತ್ನಿ ಹಾಗೂ ಟ್ರಸ್ಟ್‌ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಪ್ರಕರಣ ದಾಖಲಿಸಲು ನ್ಯಾಯಾಲಯದ ಆದೇಶ

"ಈ ಸವಾಲನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ನ್ಯಾಯಾಂಗದ ಪ್ರತಿಯೊಬ್ಬರ ಸಹಕಾರವೂ ಅಗತ್ಯವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸಮಾನತೆ ಸಾಧಿಸುವಲ್ಲಿ ನ್ಯಾಯಾಲಯಗಳು ಪ್ರಮುಖ ಪಾತ್ರವಹಿಸಲಿವೆ. ಜನ ಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಒದಗಿಸುವ ಜತೆಗೆ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಆ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಬೇಕು" ಎಂದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ರಿಜಿಸ್ಟ್ರಾರ್ ಜನರಲ್, ಸಿಬ್ಬಂದಿ ಹಾಗೂ ವಕೀಲರು ಪಾಲ್ಗೊಂಡಿದ್ದರು.

Kannada Bar & Bench
kannada.barandbench.com