ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (ಇಡಬ್ಲ್ಯುಎಸ್) ಕಲ್ಪಿಸಲಾಗಿರುವ ಮೀಸಲಾತಿ ಜಾರಿ ಮಾಡುವಂತೆ ಕೋರಿರುವ ಮನವಿ ಆಧರಿಸಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಬುಧವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ವಕೀಲ ಗಿರೀಶ್ ಭಾರಧ್ವಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ ಜೆ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಪರ ವಕೀಲರು, ಕೇಂದ್ರ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಿದೆ. ಇದು ಅನುಷ್ಠಾನಕ್ಕೆ ಬಂದಿಲ್ಲ. ಈ ಸಂಬಂಧ 2024ರ ಜನವರಿ 14ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು ಅರ್ಜಿದಾರರಿಗೂ ಈ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿತು. ಸರ್ಕಾರದ ಕ್ರಮದಿಂದ ತೊಂದರೆಯಾದವರು ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಲಿದ್ದಾರೆ. ಹೀಗಾಗಿ, ಅರ್ಜಿ ವಿಚಾರಣೆಗೆ ಪರಿಗಣಿಸಲಾಗದು ಎಂದು ತಿಳಿಸಿತು.
ಈ ವೇಳೆ ಅರ್ಜಿದಾರ ಪರ ವಕೀಲರು, ಈ ಸೌಲಭ್ಯವನ್ನು ಪಡೆಯಲು ಅರ್ಹರಿರುವವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದು ತಿಳಿಸಿದರು. ಆಗ ಪೀಠವು ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಈ ಅರ್ಜಿ ಸಂಬಂಧ ನೋಟಿಸ್ ಜಾರಿ ಮಾಡಿದಲ್ಲಿ, ಸರ್ಕಾರದ ಅಧಿಕಾರಿಗಳು ತಮ್ಮ ಕೆಲಸಗಳನ್ನು ಬಿಟ್ಟು ಇತ್ತ ಗಮನ ಹರಿಸಬೇಕಾಗುತ್ತದೆ ಎಂದು ತಿಳಿಸಿತು. ಈ ಮಧ್ಯೆ, ನ್ಯಾಯಮೂರ್ತಿಗಳಿಬ್ಬರೂ ಅಲ್ಪಕಾಲ ಸಮಾಲೋಚನೆ ನಡೆಸಿ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆ ಮುಂದೂಡಿದರು.
ಅರ್ಜಿಯಲ್ಲಿ ಏನಿದೆ?: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರ 2019ರ ಜನವರಿ 12ರಂದು ಸಂವಿಧಾನಕ್ಕೆ 103ನೇ ತಿದ್ದುಪಡಿ ತಂದಿರುವ ವಿಚಾರವನ್ನು ಗೆಜೆಟ್‌ನಲ್ಲಿ ಪ್ರಕಟಿಸಿದ್ದು, 15 ಮತ್ತು 16ನೇ ವಿಧಿಗೆ ಕಲಂ 6 ಅನ್ನು ಸೇರ್ಪಡೆಗೊಳಿಸಿದೆ. ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದಿದೆ. ಆದರೆ, ಸಂವಿಧಾನ ಬದ್ಧವಾಗಿರುವ ಈ ಮೀಸಲಾತಿ ಜಾರಿ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಆರ್ಥಿಕವಾಗಿ ಹಿಂದುಳಿದಿರುವ ವರ್ಗಕ್ಕೆ ತೊಂದರೆಯಾಗುತ್ತಿದೆ. ರಾಜ್ಯದಲ್ಲಿ ಈ ರೀತಿಯ ವಿಳಂಬದಿಂದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸರ್ಕಾರದ ಸೇವೆಗೆ ಸೇರ್ಪಡೆಯಾಗ ಬಯಸುವವರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿಯನ್ನು ಜಾರಿ ಮಾಡಬೇಕು ಎಂದು ಕೋರಲಾಗಿದೆ.
ಕೇಂದ್ರ ಸರ್ಕಾರದ ನಿರ್ಧಾರ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಅರ್ಹರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುತ್ತದೆ. ಇದರಿಂದಾಗಿ ಈ ವರ್ಗದವರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿ ಸುಧಾರಣೆಗೆ ನೆರವಾಗಲಿದೆ. ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮುನ್ನ ನ್ಯಾಯಾಲಯ ಮಧ್ಯಪ್ರವೇಶ ಮಾಡಬೇಕು. ಆದ್ದರಿಂದ ತಕ್ಷಣ ಮೀಸಲಾತಿ ಸೌಲಭ್ಯಗಳು ಜಾರಿಯಾಗುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.