ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ರಾಜ್ಯದ ಸರ್ಕಾರಿ ವೈದ್ಯಕೀಯ, ದಂತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2006ರ ಏಪ್ರಿಲ್ 1ರಿಂದ ಎನ್‌ಪಿಎಸ್ ಅನ್ವಯವಾಗಲಿದೆ ಎಂದು ಘೋಷಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
Karnataka High Court
Karnataka High Court
Published on

ರಾಜ್ಯದ ಸರ್ಕಾರಿ ವೈದ್ಯಕೀಯ, ದಂತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2020ರ ಬದಲಿಗೆ 2006ರಿಂದ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅನ್ವಯವಾಗಲಿದೆ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ನೋಟಿಸ್ ಜಾರಿಗೊಳಿಸಿದೆ.

ಶಿವಮೊಗ್ಗ ವೈದ್ಯಕೀಯ ವಿಜ್ಜಾನಗಳ ಸಂಸ್ಥೆಯ ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಾಕರಾದ ಡಾ. ಮೊಹಮ್ಮದ್ ಆರಿಫ್ ಸೇರಿದಂತೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು ಹಾಗೂ ತಾಂತ್ರಿಕ ಸಿಬ್ಬಂದಿ ಸಹಿತ 45 ಮಂದಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್ ಟಿ ನರೇಂದ್ರ ಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠವು ಅರ್ಜಿ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಶಿವಮೊಗ್ಗ ವೈದ್ಯಕೀಯ ವಿಜ್ಜಾನ ಸಂಸ್ಥೆಯ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ರಾಜ್ಯ ಸರ್ಕಾರ 2006ರಿಂದ ಎನ್‌ಪಿಎಸ್ ಅನುಷ್ಠಾನಗೊಳಿಸಿದೆ. 2016ರಲ್ಲಿ ಯೋಜನೆಯನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧೀನದಲ್ಲಿ ಬರುವ ಸ್ವಾಯತ್ತ ಸಂಸ್ಥೆಗಳು, ನಿಗಮ, ಮಂಡಳಿ, ಸೊಸೈಟಿಗಳು, ವಿವಿಗಳ ನೌಕರಿಗೂ ವಿಸ್ತರಿಸಲಾಗಿತ್ತು. ಆದರೆ, 2020ರ ಆಗಸ್ಟ್ 27ರಂದು ಆದೇಶ ಹೊರಡಿಸಿ, ಈ ಆದೇಶ ಹೊರಡಿಸಿದ ನಂತರದಿಂದ ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ಎನ್‌ಪಿಎಸ್. ಅನ್ವಯವಾಗಲಿದೆ ಎಂದು ಹೇಳಲಾಗಿದೆ, ಇದು ಕಾನೂನು ಬಾಹಿರವಾಗಿದ್ದು, 2020ರ ಆದೇಶ ರದ್ದುಪಡಿಸಬೇಕು. ರಾಜ್ಯದ ಸರ್ಕಾರಿ ವೈದ್ಯಕೀಯ, ದಂತ ವೈದ್ಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 2006ರ ಏಪ್ರಿಲ್ 1ರಿಂದ ಎನ್‌ಪಿಎಸ್ ಅನ್ವಯವಾಗಲಿದೆ ಎಂದು ಘೋಷಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

Kannada Bar & Bench
kannada.barandbench.com