ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) ಅಡಿಯ ಪ್ರಕರಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಜೊತೆಗೆ ಸಹ ಆರೋಪಿಗಳಾಗಿರುವ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಎಚ್ ಆಂಜನೇಯ ಮತ್ತು ಎನ್ ರಾಜೇಂದ್ರ ಅವರಿಗೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ದೆಹಲಿಯ ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಭ್ರಷ್ಟಾಚಾರ ನಿಯಂತ್ರಣ, ಸಿಬಿಐ ಹಾಗೂ ಹಾಲಿ, ಮಾಜಿ ಶಾಸಕರು ಮತ್ತು ಸಂಸದರಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಕಾಸ್ ಧಲ್ ಅವರು ನಾಲ್ವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ನ್ಯಾಯಾಲಯದ ಅನುಮತಿ ಪಡೆಯದೇ ವಿದೇಶ ಪ್ರಯಾಣ ಮಾಡುವಂತಿಲ್ಲ. ಆರೋಪಿಗಳು ತಲಾ ಒಂದು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶ ಮಾಡಿದೆ. ಜುಲೈ 30ರಂದು ಜಾಮೀನು ಮನವಿಯ ತೀರ್ಪನ್ನು ವಿಶೇಷ ನ್ಯಾಯಾಲಯವು ಕಾಯ್ದಿರಿಸಿತ್ತು.
ಆರೋಪಿಗಳಾದ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ದೆಹಲಿಯ ನಿವಾಸಿಗಳಾದ ಎಚ್ ಆಂಜನೇಯ ಮತ್ತು ರಾಜೇಂದ್ರ ಎನ್ ಅವರನ್ನು ಪ್ರತಿನಿಧಿಸಿದ್ದ ವಕೀಲರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಡಿ ಕೆ ಶಿವಕುಮಾರ್ ಅವರಿಗೆ ಅರ್ಹತೆ ಆಧಾರದಲ್ಲಿ ಈಗಾಗಲೇ ಜಾಮೀನು ದೊರೆತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿದಿದ್ದು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಅವರನ್ನು ಬಂಧಿಸಲಾಗಿಲ್ಲ. ಈಗ ಅವರನ್ನು ಕಸ್ಟಡಿಗೆ ಪಡೆಯುವುದರಲ್ಲಿ ಅರ್ಥವಿಲ್ಲ ಎಂದು ವಾದಿಸಿದ್ದರು.