ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಅರ್ಜಿದಾರರು ಎರಡು ಲಕ್ಷ ರೂಪಾಯಿ ಮೌಲ್ಯದ ಬಾಂಡ್‌, ಇಬ್ಬರ ಭದ್ರತೆ ನೀಡಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
Justice Shivashankar Amarannavar and Karnataka HC
Justice Shivashankar Amarannavar and Karnataka HC

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಪರಮಶಿವಯ್ಯ ಆಗಿದ್ದಾರೆ.

ಪರಮಶಿವಯ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ್‌ ಅಮರಣ್ಣವರ್‌ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಅರ್ಜಿದಾರರು ಎರಡು ಲಕ್ಷ ರೂಪಾಯಿ ಮೌಲ್ಯದ ಬಾಂಡ್‌, ಇಬ್ಬರ ಭದ್ರತೆ ನೀಡಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಶಿವಮೂರ್ತಿ ಶರಣರ ವಿರುದ್ಧ ಮಠದ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯರು ಮುರುಘಾ ಶರಣರು, ಪರಮಶಿವಯ್ಯ ಸೇರಿ ಐವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಮೈಸೂರಿನ ಒಡನಾಡಿ ಸಂಸ್ಥೆಯ ನೆರವಿನಿಂದ ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ಪೊಲೀಸರು ಪೋಕ್ಸೊ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ (ದೌರ್ಜನ್ಯ ನಿಯಂತ್ರಣ) ಕಾಯಿದೆ ಅಡಿ ಶಿವಮೂರ್ತಿ ಶರಣರು, ಪರಮಶಿವಯ್ಯ ಸೇರಿ ಐವರ ವಿರುದ್ಧ ಪ್ರಕರಣ ದಾಖಲಿಸಿ, ಅದನ್ನು ಚಿತ್ರದುರ್ಗದ ಗ್ರಾಮೀಣ ಠಾಣೆಗೆ ವರ್ಗಾಯಿಸಿದ್ದರು. ಆನಂತರ ಆರೋಪಿಗಳನ್ನು ಬಂಧಿಸಲಾಗಿತ್ತು.

ಆನಂತರ ಮತ್ತಿಬ್ಬರು ವಿದ್ಯಾರ್ಥಿನಿಯರು ನೀಡಿದ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿ ಪರಮಶಿವಯ್ಯ ಅವರು ಆರೋಪಿಯಾಗಿದ್ದರು. ಆನಂತರ ಎರಡನೇ ಪ್ರಕರಣದಲ್ಲಿ ಆರೋಪ ಪಟ್ಟಿಯಿಂದ ಪರಮಶಿವಯ್ಯ ಅವರನ್ನು ಕೈಬಿಡಲಾಗಿದೆ. ಮಕ್ಕಳ ಮೇಲೆ ಸ್ವಾಮೀಜಿ ಅತ್ಯಾಚಾರ ಎಸಗಲು ಪರಮಶಿವಯ್ಯ ನೆರವಾಗಿದ್ದಾರೆ ಎಂಬುದು ಅವರ ಮೇಲಿನ ಆರೋಪವಾಗಿದೆ.

ಆರೋಪಿ ಪರಮಶಿವಯ್ಯ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2)(n), 376(DA), 376(3), 201, 202, 506 ಜೊತೆಗೆ 34 ಮತ್ತು 37, ಪೋಕ್ಸೊ ಕಾಯಿದೆಯ ಸೆಕ್ಷನ್‌ಗಳಾದ 17, 5(L), 6, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯಿದೆ ಸೆಕ್ಷನ್‌ಗಳಾದ 3(1), W(1)(2), 3(2)(v)(va) ಮತ್ತು ಧಾರ್ಮಿಕ ಸಂಸ್ಥೆಗಳ ದುರ್ಬಳಕೆ ನಿಷೇಧ ಕಾಯಿದೆ ಸೆಕ್ಷನ್‌ಗಳಾದ 3(f) 7 ಹಾಗೂ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣಾ) ಕಾಯಿದೆ ಸೆಕ್ಷನ್‌ 75ರ ಅಡಿ ಪರಮಶಿವಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪರಮಶಿವಯ್ಯ ಅವರ ಪರವಾಗಿ ಹಿರಿಯ ವಕೀಲರಾದ ಸಿ ವಿ ನಾಗೇಶ್‌ ವಾದಿಸಿದ್ದರು. ವಕೀಲರಾದ ಕೆ ಬಿ ಕೆ ಸ್ವಾಮಿ ವಕಾಲತ್ತು ವಹಿಸಿದ್ದರು.

Kannada Bar & Bench
kannada.barandbench.com