ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಎರಡನೇ ಆರೋಪಿ ರಶ್ಮಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಅರ್ಜಿದಾರೆ ಎರಡು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್‌ ನೀಡಬೇಕು ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ಹೈಕೋರ್ಟ್‌ ವಿಧಿಸಿದೆ.
Murugha Mutt
Murugha Mutt
Published on

ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಎರಡನೇ ಆರೋಪಿ ಎಸ್ ರಶ್ಮಿಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಕುಮ್ಮಕ್ಕು ನೀಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ರಶ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮದ್‌ ನವಾಜ್‌ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಅರ್ಜಿದಾರೆ ಎರಡು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್‌ ನೀಡಬೇಕು ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಹಾಗೂ ಸಹಕರಿಸಬೇಕು ಎಂದು ಜಾಮೀನು ಮಂಜೂರಾತಿಗೆ ಹೈಕೋರ್ಟ್‌ ಷರತ್ತು ವಿಧಿಸಿದೆ. ಇದರೊಂದಿಗೆ ಈ ಪ್ರಕರಣದ ಬಂಧನಕ್ಕೆ ಒಳಗಾಗಿದ್ದ ಶಿವಮೂರ್ತಿ ಶರಣರೂ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.

ಮೊದಲನೇ ಆರೋಪಿ ಮುರುಘಾ ಮಠದ ಡಾ.ಶಿವಮೂರ್ತಿ ಶರಣರಿಗೆ ಕುಮ್ಮಕ್ಕು ಹಾಗೂ ಸಹಕಾರ ನೀಡಿದ ಆರೋಪ ಅರ್ಜಿದಾರೆಯ ಮೇಲಿದೆ. ಇದೇ ಆರೋಪ ಮೂರನೇ ಆರೋಪಿಯಾದ ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಪರಮಶಿವಯ್ಯ ಮೇಲಿದೆ. ಅವರಿಗೆ ಈಗಾಗಲೇ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮತ್ತೊಂದೆಡೆ ಮೊದಲನೆ ಆರೋಪಿ ಶಿವಮೂರ್ತಿ ಶರಣರಿಗೆ ಜಾಮೀನು ದೊರೆತಿದೆ. ಆದ್ದರಿಂದ ಅರ್ಜಿದಾರೆಯೂ ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಇಬ್ಬರು ಬಾಲಕಿಯರು ಮೈಸೂರಿನ ನಜರಾಬಾದ್ ಪೊಲೀಸ್‌ ಠಾಣೆಯಲ್ಲಿ 2022ರ ಆಗಸ್ಟ್‌ 26ರಂದು ದೂರು ದಾಖಲಿಸಿ, ಮುರುಘಾ ಶರಣರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಲ್ಲಿ ಎಸ್ ರಶ್ಮಿ, ಬಾಲಕಿಯರನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು ಮತ್ತು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಸ್ವಾಮೀಜಿಯ ಕೃತ್ಯಕ್ಕೆ ಸಹಕರಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಶ್ಮಿ ಅವರನ್ನು ಪೊಲೀಸರು ಬಂಧಿಸಿದ್ದರು. ಚಿತ್ರದುರ್ಗದ ಸತ್ರ ನ್ಯಾಯಾಲಯ ರಶ್ಮಿಗೆ ಜಾಮೀನು ನಿರಾಕರಿಸಿತ್ತು. ಇದರಿಂದ ಆಕೆ ಹೈಕೋರ್ಟ್ ಮೊರೆ‌ ಹೋಗಿದ್ದರು.

Kannada Bar & Bench
kannada.barandbench.com