ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ಹಿರಿಯ ವಕೀಲ ಅಶೋಕ್ ಎನ್. ನಾಯಕ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ನಡೆಸಲು ಅಶೋಕ್ ನಾಯಕ್ ಅವರನ್ನು ನೇಮಿಸಲಾಗಿದೆ ಎಂದು ಬುಧವಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಾರ್ಚ್ 14ರಂದು ಯಡಿಯೂರಪ್ಪ ವಿರುದ್ಧ ಸದಾಶಿವ ನಗರ ಠಾಣೆಯಲ್ಲಿ ಪೋಕ್ಸೊ ಕಾಯಿದೆ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್ 354 (ಎ) ಅಡಿ (ಲೈಂಗಿಕ ಕಿರುಕುಳ) ಎಫ್‌ಐಆರ್ ದಾಖಲಿಸಲಾಗಿದೆ. ಈಚೆಗೆ ಪ್ರಕರಣದ ದೂರುದಾರೆ ಮೃತಪಟ್ಟಿದ್ದಾರೆ.
ಎಚ್ ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲೂ ವಿಚಾರಣಾಧೀನ ನ್ಯಾಯಾಲಯದಲ್ಲಿ ವಾದಿಸಲು ಅಶೋಕ್ ನಾಯಕ್ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಲಾಗಿದೆ.