ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದ ಅಡಿ ಮೊದಲ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಶುಕ್ರವಾರ ಬೆಳಗಿನ ಜಾವ ಜಿಲ್ಲಾ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಗುರುವಾರ ರಾತ್ರಿ 10 ಸುಮಾರಿಗೆ ಸ್ವಾಮೀಜಿ ಅವರನ್ನು ಬಂಧಿಸಿ ಪ್ರಾಥಮಿಕ ತನಿಖೆಗೆ ಒಳಪಡಿಸಲಾಯಿತು. ಆನಂತರ ಜಿಲ್ಲಾ ವೈದ್ಯರು ಸ್ವಾಮೀಜಿ ಅವರಿಗೆ ಆರೋಗ್ಯ ತಪಾಸಣೆ ನಡೆಸಿದರು. ಬಳಿಕ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಕೆ ಕೋಮಲಾ ಅವರ ಮುಂದೆ ಹಾಜರುಪಡಿಸಲಾಯಿತು. ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು ಸ್ವಾಮೀಜಿ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು. ಅಂತಿಮವಾಗಿ ಪೊಲೀಸರು ಸ್ವಾಮೀಜಿ ಅವರನ್ನು ಕಾರಾಗೃಹದ ವಶಕ್ಕೆ ನೀಡಿದ್ದಾರೆ.
ಈ ಮಧ್ಯೆ, ಸ್ವಾಮೀಜಿ ಅವರಿಗೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದಕ್ಕೂ ಮುನ್ನ, ಸ್ವಾಮೀಜಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮುಂದಾದ ಘಟನೆ ನಡೆದಿದೆ. ಇದಕ್ಕೆ ನ್ಯಾಯಾಧೀಶರು ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.