ಪೋಕ್ಸೊ ಪ್ರಕರಣ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಅನ್ವಯಿಸದೆ ಇರುವ ಕಾಯಿದೆಯ ವಿವಿಧ ಸೆಕ್ಷನ್‌ಗಳನ್ನು ಸೇರಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಕಾನೂನಿಗೆ ವಿರುದ್ಧ ಎಂದು ಶಿವಮೂರ್ತಿ ಮುರುಘಾ ಶರಣರ ಪರ ವಾದ.
Karnataka HC and Shivamurthy Muruga Sharanaru
Karnataka HC and Shivamurthy Muruga Sharanaru
Published on

ಪೋಕ್ಸೊ ಪ್ರಕರಣ ಮತ್ತು ಆ ಆರೋಪಕ್ಕೆ ಪೂರಕವಾಗಿ ವಿವಿಧ ಗುರುತರ ಅಪರಾಧಗಳ ಅಡಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ಆರಂಭವಾಗಬೇಕಿತ್ತು.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಎರಡು ಪ್ರತ್ಯೇಕ ಕ್ರಿಮಿನಲ್‌ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು ಪ್ರಕರಣಕ್ಕೆ ಅನ್ವಯಿಸದ ಕಾಯಿದೆಯ ವಿವಿಧ ಸೆಕ್ಷನ್‌ಗಳನ್ನು ಸೇರಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿವೆ. ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು 2023ರ ಏಪ್ರಿಲ್‌ 20ರಂದು ಶರಣರ ವಿರುದ್ಧ ಆರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು ಆದೇಶಿಸಿದೆ. ಈ ಆದೇಶ ದೋಷಪೂರಿತವಾಗಿದ್ದು ಇದಕ್ಕೆ ತಡೆ ನೀಡಬೇಕು ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ಪೀಠವು ಚಿತ್ರದುರ್ಗದ ವಿಶೇಷ ನ್ಯಾಯಾಲಯದ ವಿಚಾರಣೆಯ ಮುಂದಿನ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಜೂನ್‌ 21ಕ್ಕೆ ಮುಂದೂಡಿತು.

ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಆರೋಪ ಪಟ್ಟಿಗಳನ್ನು ಸಲ್ಲಿಸಲಾಗಿದೆ ಎಂದು ಮತ್ತೊಂದು ಅರ್ಜಿಯಲ್ಲಿ ಅರ್ಜಿದಾರರು ಆಕ್ಷೇಪಿಸಿದ್ದಾರೆ. ವಕೀಲ ಕೆ ಬಿ ಕೆ ಸ್ವಾಮಿ ಅವರು ಅಡ್ವೊಕೇಟ್‌ ಆನ್‌ ರೆಕಾರ್ಡ್‌ ಆಗಿದ್ದಾರೆ.

Also Read
ಅತ್ಯಾಚಾರ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಶರಣರು; ಸರ್ಕಾರಕ್ಕೆ ನೋಟಿಸ್‌ ಜಾರಿ

ಪ್ರಕರಣದ ಹಿನ್ನೆಲೆ: ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ–2015ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. 

‘ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ 2022ರ ಆಗಸ್ಟ್‌ 26ರಂದು ದೂರು ದಾಖಲಿಸಿದ ನಂತರ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Kannada Bar & Bench
kannada.barandbench.com