ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿಯತ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿಯತ ಜಾಮೀನು ಮತ್ತು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ವಾದ ಆಲಿಸಿದ ನ್ಯಾಯಾಲಯವು ಎಸ್‌ಐಟಿ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು.
ಹೊಳೆನರಸೀಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 354, 354ಎ, 354ಬಿ, 354ಡಿ, 376, 376ಕೆ, 506 ಮತ್ತು 509ರ ಅಡಿ ದಾಖಲಾಗಿರುವ ಎಫ್‌ಐಆರ್ ಸಂಬಂಧ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಎಫ್‌ಐಆರ್ ಸಂಬಂಧ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ 2024ರ ಜೂನ್ 26ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿತ್ತು. ಇದರಿಂದ ಅವರು ನಿಯತ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಸಿಐಡಿ ಪೊಲೀಸರು ಐಪಿಸಿ ಸೆಕ್ಷನ್‌ಗಳಾದ 376(2)(ಎನ್), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ದಾಖಲಿಸಿರುವ ಪ್ರಕರಣದಲ್ಲಿ ಪ್ರಜ್ವಲ್ ನಿರೀಕ್ಷಣಾ ಜಾಮೀನು ಕೋರಿದ್ದಾರೆ.