ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸೇರಿ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಹಾಸನದ ಹೊಳೆನರಸೀಪುರ, ಬೆಂಗಳೂರಿನ ಸಿಐಡಿ-ಎಸ್‌ಐಟಿ ಮತ್ತು ಸೈಬರ್ ಪೊಲೀಸರು ದಾಖಲಿಸಿರುವ ಮೂರು ಪ್ರಕರಣಗಳಲ್ಲಿಯೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ನಡೆಸಿದರು.
ವಿಚಾರಣೆಯಲ್ಲಿ ಹಾಜರಿದ್ದ ವಿಶೇಷ ತನಿಖಾ ದಳದ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರಿಗೆ ನೋಟಿಸ್ ಪಡೆಯಲು ನ್ಯಾಯಾಲಯವು ಸೂಚಿಸಿ, ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.
ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ), 376, 506, 505 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.
ಇನ್ನು, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 (2) (ಎನ್), 506, 354ಎ(1)(ii), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೇ, ಬೆಂಗಳೂರಿನ ಸಿಐಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್), 376(2)(ಕೆ), 506, 354ಎ(1)(ii), 354(ಬಿ), 354(ಸಿ) ಮತ್ತು ಐಟಿ ಕಾಯಿದೆ ಸೆಕ್ಷನ್ 66ಇ ಅಡಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಹಾಸನ ಲೋಕಸಭಾ ಚುನಾವಣೆ ಮುಗಿದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ಇಲ್ಲಿಯವರೆಗೂ ದೇಶಕ್ಕೆ ಮರಳಿಲ್ಲ. ಈಚೆಗೆ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿರುವ ಪ್ರಜ್ವಲ್ ಮೇ 31ರಂದು ವಿಶೇಷ ತನಿಖಾ ದಳದ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಈ ಮಧ್ಯೆ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.