

ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ವಂಶವಾಹಿ (ಡಿಎನ್‌ಎ) ಮತ್ತು ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ ಆಜೀವ ಸೆರೆವಾಸ ಶಿಕ್ಷೆ ಬದಿಗೆ ಸರಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಚ್ ಪಿ ಸಂದೇಶ್ ಮತ್ತು ಟಿ ವೆಂಕಟೇಶ್ ನಾಯಕ್ ಅವರ ವಿಭಾಗೀಯ ಪೀಠ ನಡೆಸಿತು.
ಪ್ರಜ್ವಲ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು “ಕೆಲವು ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ” ಎಂದರು.
ಆಗ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು “ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು” ಎಂದರು.
ಇದನ್ನು ಆಲಿಸಿದ ಪೀಠವು “ಸಿಆರ್‌ಪಿಸಿ ಸೆಕ್ಷನ್ 391ರ ಅಡಿ ಕೆಲವು ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಮಧ್ಯಂತರ ಅರ್ಜಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಾರೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್ ಒಂದು ವಾರ ಕಾಲಾವಕಾಶ ನೀಡಲಾಗಿದೆ” ಎಂದು ದಾಖಲಿಸಿ, ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿತು.
2025ರ ಡಿಸೆಂಬರ್ 3ರಂದು ತನಗೆ ವಿಧಿಸಲಾಗಿರುವ ಆಜೀವ ಸೆರೆವಾಸದ ಶಿಕ್ಷೆ ಬದಿಗೆ ಸರಿಸಿ ಜಾಮೀನು ಮಂಜೂರು ಮಾಡುವಂತೆ ಕೋರಿ ಪ್ರಜ್ವಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. “ದಾಖಲೆಗಳನ್ನು ಪರಿಗಣಿಸಿ, ಅಪರಾಧದ ಗಂಭೀರತೆಯ ಹಿನ್ನೆಲೆಯಲ್ಲಿ, ಪ್ರಜ್ವಲ್ ಬಿಡುಗಡೆ ಮಾಡಿದರೆ ಅದು ಇತರರ ಮೇಲೆ ಉಂಟು ಮಾಡುವ ಪರಿಣಾಮವನ್ನು ಪರಿಗಣಿಸಿ, ಪ್ರಜ್ವಲ್‌ಗೆ ವಿಧಿಸಿರುವ ಆಜೀವ ಶಿಕ್ಷೆ ಬದಿಗೆ ಸರಿಸಿ ಜಾಮೀನು ಮಂಜೂರು ಮಾಡುವುದು ಸೂಕ್ತವಲ್ಲ” ಎಂದಿತ್ತು.
ಪ್ರಕರಣದ ಹಿನ್ನೆಲೆ: ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆಗಸ್ಟ್ 2ರಂದು ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ಗೆ ಜೀವನ ಪರ್ಯಂತ ಜೈಲು ಶಿಕ್ಷೆಯ ಜೊತೆಗೆ ₹11.60 ಲಕ್ಷ ದಂಡವನ್ನು ವಿಧಿಸಿತ್ತು. ಇದರಲ್ಲಿ ಸಂತ್ರಸ್ತೆಗೆ ₹11.25 ಲಕ್ಷವನ್ನು ಪರಿಹಾರದ ರೂಪದಲ್ಲಿ, ಬಾಕಿ ಹಣವನ್ನು ಸರ್ಕಾರದ ಖಾತೆಗೆ ಜಮೆ ಮಾಡಲು ಆದೇಶಿಸಿತ್ತು.