ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಇಂದು (ಭಾನುವಾರ) ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಬಿಜಯ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.
ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತನಿಖಾ ತಂಡ ಮೂವರು ಸದಸ್ಯರನ್ನು ಒಳಗೊಂಡಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿದ್ದ ಬಿ ಕೆ ಸಿಂಗ್ ತಂಡದ ನೇತೃತ್ವ ವಹಿಸಿದ್ದು ಬೆಂಗಳೂರಿನ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕಿ ಸೀಮಾ ಲಾಠ್ಕರ್ ಅವರು ಸದಸ್ಯರಾಗಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ಅನೇಕ ವೀಡಿಯೊಗಳು ಎರಡು ಮೂರು ಪೆನ್‌ಡ್ರೈವ್‌ಗಳಲ್ಲಿ ದೊರೆತ ರಾಜ್ಯದೆಲ್ಲೆಡೆ ಸುದ್ದಿಗೆ ಗ್ರಾಸವಾಗಿತ್ತು. ಅವರು ಸಾವಿರಾರು ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಇದು ಸುಳ್ಳು ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು. ಪ್ರಜ್ವಲ್ ರೇವಣ್ಣ ಪ್ರಸ್ತುತ ವಿದೇಶದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಮಹಿಳೆಯೊಬ್ಬರು ಹಾಸನ ಜಿಲ್ಲೆ ಹೊಳೆ ನರಸಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354A, 354D, 506, 509ರ ಅಡಿ ಕ್ರಿಮಿನಲ್ ಮೊಕದ್ದಮೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಾಖಲಾದ, ಇನ್ನು ಮುಂದೆ ದಾಖಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ತನಿಖಾ ತಂಡಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ ತನಿಖಾ ವರದಿಯನ್ನು ಶೀಘ್ರವೇ ಡಿಜಿ ಮತ್ತು ಐಜಿಪಿ ಅವರಿಗೆ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.
ಆದೇಶದ ಪ್ರತಿ