ಪ್ರಜ್ವಲ್ ಲೈಂಗಿಕ ಹಗರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
ಎಚ್ ಡಿ ರೇವಣ್ಣ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಇಂದು ನಡೆಸಿದರು.
ವಿಚಾರಣೆಯಲ್ಲಿ ಭಾಗಿಯಾದ ವಿಶೇಷ ತನಿಖಾ ದಳದ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎನ್ ಜಗದೀಶ್ ಅವರು “ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಯಾವುದೇ ಹೊಸ ಸೆಕ್ಷನ್‌ಗಳನ್ನು ಅನ್ವಯಿಸಿಲ್ಲ. ರೇವಣ್ಣ ಅವರಿಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಅವರ ವಿರುದ್ಧದ ಆರೋಪಗಳು ಜಾಮೀನು ನೀಡುವಂತಹವಾಗಿವೆ” ಎಂದು ಮೆಮೊ ಸಲ್ಲಿಸಿದರು.
ಆಗ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್ ಅವರು “ತಮ್ಮ ಅರ್ಜಿಯನ್ನು ಹಿಂಪಡೆಯುತ್ತಿದ್ದು, ಎಸ್‌ಪಿಪಿ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು” ಎಂದು ನ್ಯಾಯಾಲಯಕ್ಕೆ ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಾಲಯವು ಅರ್ಜಿ ಇತ್ಯರ್ಥಪಡಿಸಿದೆ.