ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕರಣ: ತಾತ್ಕಾಲಿಕ ಆಯ್ಕೆಪಟ್ಟಿಗೆ ತಡೆ ವಿಧಿಸಿದ ಹೈಕೋರ್ಟ್‌

ಅರ್ಜಿ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್‌ 9ಕ್ಕೆ ಮುಂದೂಡಿದ ನ್ಯಾಯಾಲಯ.
Karnataka High Court
Karnataka High Court

ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಅಭ್ಯರ್ಥಿಗಳ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಕೆಯಲ್ಲಿ ಉಂಟಾಗಿರುವ ಗೊಂದಲದ ಪರಿಣಾಮ, 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಗೆ ಕರ್ನಾಟಕ ಹೈಕೋರ್ಟ್ ಈಚೆಗೆ ತಡೆಯಾಜ್ಞೆ ನೀಡಿದೆ.

1:2ರಲ್ಲಿ ಆಯ್ಕೆಯಾಗಿ ಅರ್ಹತೆ ಇದ್ದರೂ ಮೀಸಲಾತಿ ಗೊಂದಲದಿಂದ ತಾತ್ಕಾಲಿಕ ಆಯ್ಕೆ ಪಟ್ಟಿ 1:1ರಲ್ಲಿ ಹೆಸರು ಪ್ರಕಟವಾಗದ ಉಡುಪಿಯ ಯಡತಾಡಿ ಗ್ರಾಮದ ಅನಿತಾ ಸೇರಿ 40ಕ್ಕೂ ಅಧಿಕ ಮಹಿಳಾ ಹುದ್ದೆ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ಅರ್ಜಿ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್‌ 9ಕ್ಕೆ ಮುಂದೂಡಿದೆ.

ಅಲ್ಲದೆ, ಮುಂದಿನ ವಿಚಾರಣೆವರೆಗೆ ನವೆಂಬರ್‌ 18ರಂದು ಶಿಕ್ಷಣ ಇಲಾಖೆ ಪ್ರಕಟಿಸಿರುವ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಆಕ್ಷೇಪವೇನು?: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನವೆಂಬರ್‌ 18ರಂದು ಪ್ರಕಟಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವವರ ಅಭ್ಯರ್ಥಿಗಳ ಹೆಸರುಗಳಿವೆ. ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ಜಾತಿ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ ಎಂಬ ಕಾರಣಕ್ಕೆ ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಜತೆಗೆ, ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಆಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಆಕ್ಷೇಪಿಸಿರುವ ಅರ್ಜಿದಾರರು, ನವೆಂಬರ್‌ 18ರಂದು ಪ್ರಕಟಿಸಿರುವ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.

Related Stories

No stories found.
Kannada Bar & Bench
kannada.barandbench.com