ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಹಾಗೂ ಬಿಬಿಎಂಪಿಯ ಆಸ್ತಿ ಕರ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ವತಿಯಿಂದ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪ ಸಂಬಂಧ ದಾಖಲಾಗಿದ್ದ ಪ್ರಕರಣ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ವಿಶೇಷ (ಮ್ಯಾಜಿಸ್ಟ್ರೇಟ್) ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್ ಅವರು ರಾಮಲಿಂಗಾರೆಡ್ಡಿ ಅವರಿಗೆ ಜಾಮೀನುರಹಿತ ಬಂಧನ ವಾರೆಂಟ್ ಜಾರಿ ಮಾಡಿ, ವಿಚಾರಣೆ ಮುಂದೂಡಿದ್ದಾರೆ.
“ಒಂಭತ್ತನೇ ಆರೋಪಿ ಮಂಜುನಾಥ ರೆಡ್ಡಿ ಹಾಜರಿದ್ದು, ಉಳಿದವರು ಗೈರಾಗಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಮತ್ತು ಪದ್ಮಾವತಿ ಪರ ವಕೀಲರು ಸಲ್ಲಿಸಿರುವ ಅರ್ಜಿಗಳನ್ನು ಪುರಸ್ಕರಿಸಲಾಗಿದ್ದು, ಅವರಿಗೆ ಇಂದಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ರಾಮಲಿಂಗಾರೆಡ್ಡಿ ಅವರಿಗೆ ಜಾಮೀನುರಹಿತ ವಾರೆಂಟ್ ಅನ್ನು ಮತ್ತೆ ಜಾರಿ ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.
ಪ್ರಕರಣದ ಹಿನ್ನೆಲೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿ ಕರ ಹೆಚ್ಚಳ ಮಾಡಿದ್ದನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ 350ಕ್ಕೂ ಹೆಚ್ಚು ಮಂದಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂದು ಆಕ್ಷೇಪಿಸಿ ಹಲಸೂರು ಗೇಟ್ ಠಾಣೆಯ ಪೊಲೀಸರು ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ರಿಜ್ವಾನ್ ಅರ್ಷದ್, ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಧ್ಯಕ್ಷ ಜಿ ಶೇಖರ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್, ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಧ್ಯಕ್ಷ ಜಿ ಕೃಷ್ಣಪ್ಪ, ಪದ್ಮಾವತಿ ಮತ್ತು ಮಂಜುನಾಥ ರೆಡ್ಡಿ ಅವರ ವಿರುದ್ದ 2022ರ ಜನವರಿ 4ರಂದು ಪ್ರಕರಣ ದಾಖಲಿಸಿದ್ದರು.
ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದಲ್ಲಿ ವಿಪತ್ತು ನಿರ್ವಹಣಾ ಕಾಯಿದೆ ಸೆಕ್ಷನ್ 51 (ಬಿ) ಮತ್ತು ಐಪಿಸಿ ಸೆಕ್ಷನ್ 188 ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಡಿ ಕೆ ಶಿವಕುಮಾರ್, ಬಿ ಕೆ ಹರಿಪ್ರಸಾದ್, ಬೆಂಗಳೂರು ಕೇಂದ್ರ ಕಾಂಗ್ರೆಸ್ ಅಧ್ಯಕ್ಷ ಜಿ ಶೇಖರ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್, ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಧ್ಯಕ್ಷ ಜಿ ಕೃಷ್ಣಪ್ಪ ಅವರ ವಿರುದ್ದದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಈಗಾಗಲೇ ವಜಾ ಮಾಡಿದೆ. ಉಳಿದವ ವಿರುದ್ಧದ ಪ್ರಕ್ರಿಯೆ ಚಾಲ್ತಿಯಲ್ಲಿದೆ.