ಸೋನಿಯಾ, ರಾಹುಲ್‌ ಇ ಡಿ ವಿಚಾರಣೆ ಆಕ್ಷೇಪಿಸಿ ಪ್ರತಿಭಟನೆ: ನಲಪಾಡ್‌ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಡಿಸಿಎಂ ಡಿ ಕೆ ಶಿವಕುಮಾರ್‌ ವಿರುದ್ಧದ ದೂರು ಹಾಗೂ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್‌ನ ಮತ್ತೊಂದು ಪೀಠ ಈ ಹಿಂದೆ ಆದೇಶಿಸಿತ್ತು. ಆ ಆದೇಶ ಆಧರಿಸಿ ನಲಪಾಡ್‌ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಲಾಗಿದೆ.
Mohammed Nalapad and Karnataka HC
Mohammed Nalapad and Karnataka HC

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ್ದ ಆರೋಪದ ಮೇಲೆ ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ವಿರುದ್ಧ ಶಿವಾಜಿನಗರ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ.

ನಲಪಾಡ್‌ ವಿರುದ್ಧದ ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಶೇಷ (ಮ್ಯಾಜಿಸ್ಟ್ರೇರ್ಟ್) ನ್ಯಾಯಾಲಯದ ವಿಚಾರಣೆ ರದ್ದತಿ ಕೋರಿ ಮೊಹಮ್ಮದ್‌ ಹ್ಯಾರೀಸ್‌ ನಲಪಾಡ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಇದೇ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ವಿರುದ್ಧದ ದೂರು ಹಾಗೂ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್‌ನ ಮತ್ತೊಂದು ಪೀಠ ಈ ಹಿಂದೆ ಆದೇಶಿಸಿತ್ತು. ಆ ಆದೇಶ ಆಧರಿಸಿ ನಲಪಾಡ್‌ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಲಾಗಿದೆ.

ವಿಚಾರಣೆ ನೆಪದಲ್ಲಿ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ 2022ರ ಜೂನ್‌ 16ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.  ಕ್ವೀನ್ಸ್‌ ರಸ್ತೆಯಲ್ಲಿ ಅರ್ಜಿದಾರ ಮೊಹಮ್ಮದ್‌ ನಲಪಾಡ್‌ ಸೇರಿದಂತೆ ಕೆಪಿಸಿಸಿಯ ಇತರೆ ಮುಖಂಡರು ಹಾಗೂ ಸುಮಾರು 800 ಅಧಿಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶಿವಾಜಿನಗರ ಠಾಣಾ ಸಬ್‌ ಇನ್ಸ್‌ಪೆಕ್ಟರ್‌ ಆರ್‌ ಶರತ್‌ ಬಾಬು ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 188 ಮತ್ತು ಕರ್ನಾಟಕ ಪೊಲೀಸ್‌ ಕಾಯಿದೆ ಸೆಕ್ಷನ್‌ 103 ಅಡಿಯಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ನ್ಯಾಯಾಲಯದ ಸೂಚನೆ ಮೇರೆಗೆ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದ ಶಿವಾಜಿನಗರ ಠಾಣಾ ಪೊಲೀಸರು, ಪೂರ್ವಾನುಮತಿಯಿಲ್ಲದೆ ಪ್ರತಿಭಟನೆ ನಡೆಸಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ (ಮ್ಯಾಜಿಸ್ಟ್ರೇಟ್‌) ನ್ಯಾಯಾಲಯ ಅರ್ಜಿದಾರರ ವಿರುದ್ಧ ಸಂಜ್ಞೇಯ ಪರಿಗಣಿಸಿತ್ತು. ಇದರಿಂದ ಹೈಕೋರ್ಟ್‌ ಮೊರೆ ಹೋಗಿದ್ದ ಅರ್ಜಿದಾರರು, ದುರುದ್ದೇಶಪೂರಿತ ಮತ್ತು ದ್ವೇಷಭಾವನೆಯಿಂದ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಪ್ರಕರಣ ಕುರಿತ ಖಾಸಗಿ ದೂರು ಮತ್ತು  ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿದ್ದರು.

Related Stories

No stories found.
Kannada Bar & Bench
kannada.barandbench.com