ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ: ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ, ಕಾನೂನು-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿದ್ದರಾಮಯ್ಯರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು.
Chief Minister Siddaramaiah
Chief Minister Siddaramaiah

ಭ್ರಷ್ಟಾಚಾರದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಸಂಬಂಧ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.

ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಶತಭಿಷ್‌ ಶಿವಣ್ಣ ಅವರ ವಾದ ಆಲಿಸಿದ ಪೀಠವು ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ತಡೆ ನೀಡಿತು. ಅಲ್ಲದೇ ಸರ್ಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 15ಕ್ಕೆ ಮುಂದೂಡಿತು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕೆ ಎಸ್ ಈಶ್ವರಪ್ಪ ಕಾರಣ ಎಂದು ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ 2022ರ ಏಪ್ರಿಲ್ 14ರಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ರೇಸ್‌ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ನಡೆಸಲಾಗಿತ್ತು. ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ, ಕಾನೂನು-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಪ್ರತಿಭಟನಾಕಾರರ ವಿರುದ್ದ ಹೈಗ್ರೌಂಡ್ಸ್‌ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗಿತ್ತು.

ತನಿಖೆ ನಡೆಸಿದ್ದ ಪೊಲೀಸರು 2023ರ ಫೆಬ್ರವರಿ 12ರಂದು ಆರೋಪ ಪಟ್ಟಿ ಸಲ್ಲಿಸಿದ್ದರು. ಅದರಲ್ಲಿ ಸಿದ್ದರಾಮಯ್ಯನವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು. ಪ್ರಕರಣವನ್ನು ಜೂನ್ 13ರಂದು 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿತ್ತು. ಪ್ರಕರಣ, ಎಫ್‌ಐಆರ್ ಹಾಗೂ ವಿಚಾರಣಾಧೀನ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.

Related Stories

No stories found.
Kannada Bar & Bench
kannada.barandbench.com